ಜಗದೀಶ್ ಶೆಟ್ಟರ್
ಬೆಳಗಾವಿ: ‘ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ, ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸುತ್ತಿದ್ದಾರೆ. ಮತ್ತೊಂದೆಡೆ, ನಾನು ಆರ್ಥಿಕ ತಜ್ಞ ಮತ್ತು ದಾಖಲೆಯ ಬಜೆಟ್ ಮಂಡಿಸಿದವನು ಎಂದು ಅವರೇ ಹೇಳುತ್ತಾರೆ. ಹಾಗಾದರೆ ನೀವು ಆರ್ಥಿಕ ಸ್ಥಿತಿ ಸುಧಾರಿಸಬಹುದಿತ್ತು. ಏಕೆ ಸುಧಾರಿಸಲಿಲ್ಲ’ ಎಂದು ಸಂಸದ ಜಗದೀಶ ಶೆಟ್ಟರ್ ಪ್ರಶ್ನಿಸಿದರು.
‘ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಇದ್ದಾಗ, ಕರ್ನಾಟಕದ ಆರ್ಥಿಕ ಪರಿಸ್ಥಿತಿ ಹಾಳಾಗಿದೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ, ಇಲ್ಲಿ ಸೋಮವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು.
‘ಅಂದು ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಸದನದಲ್ಲಿ ಏಕೆ ಪ್ರಶ್ನಿಸಲಿಲ್ಲ. ಅಂದು ಪ್ರಯೋಜನ ಪಡೆದವರೇ ಇಂದು ಟೀಕೆ ಮಾಡುತ್ತಿದ್ದಾರೆ. ನಮ್ಮ ಅಧಿಕಾರವಧಿಯಲ್ಲಿ ಮಂಜೂರಾಗಿದ್ದ ಕಾಮಗಾರಿಗಳೇ ಇಂದಿಗೂ ನಡೆಯುತ್ತಿವೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಬಿಡಿಗಾಸು ಅನುದಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್‌ನ ಶಾಸಕರೇ ಹೇಳುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ನಿಂತಿದೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ’ ಎಂದು ದೂರಿದರು.
‘ಈ ಹಿಂದೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಮಾಡಿದ್ದ ಸಾಲವನ್ನು ಬಡ್ಡಿ ಸಮೇತವಾಗಿ ತೀರಿಸಿ ದೇಶವನ್ನು ಉತ್ತಮ ಸ್ಥಿತಿಗೆ ತಂದವರು ಪ್ರಧಾನಿ ನರೇಂದ್ರ ಮೋದಿ. ಜನರು ಅಧಿಕಾರ ಕೊಟ್ಟಾಗ, ಉತ್ತಮವಾಗಿ ಕೆಲಸ ಮಾಡಬೇಕೇ ಹೊರತು, ಕೊಂಕು ಮಾತನಾಡಬಾರರು. ನಿಮ್ಮ ಕೈಯಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಆಗದಿದ್ದರೆ, ಅಧಿಕಾರ ಬಿಟ್ಟು ಹೋಗಿ. ನಾವು ಸುಧಾರಿಸುತ್ತೇವೆ’ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
‘ಹುಬ್ಬಳ್ಳಿಯಲ್ಲಿ ಭಾನುವಾರ ಅತ್ಯಾಚಾರ ಯತ್ನ, ಕೊಲೆ ಆರೋಪಿ ರಿತೇಶಕುಮಾರ್ ಅವರನ್ನು ಪೊಲೀಸರು ಗುಂಡಿಕ್ಕಿ ಕೊಂದರು. ಆದರೆ, ಸಿದ್ದರಾಮಯ್ಯ ಅಥವಾ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂಥ ಧೈರ್ಯ ತೋರಿಲ್ಲ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಗೂಂಡಾಗಿರಿಗೆ ಕಡಿವಾಣ ಬಿದ್ದಿದೆ. ಹುಬ್ಬಳ್ಳಿಯಲ್ಲಿ ಎನ್‌ಕೌಂಟರ್ ಮಾಡಿದ ಪೊಲೀಸರನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸಬೇಕು. ಆಗ ಆಡಳಿತ ವ್ಯವಸ್ಥೆ ಸುಧಾರಿಸುತ್ತದೆ’ ಎಂದರು.
‘ಕರ್ನಾಟಕದಲ್ಲಿ ಮನೆ–ಮನೆಗೆ ಹೋಗಿ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಿಲ್ಲ. ಗುಜರಾತ್‌ನಲ್ಲಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ನಿರ್ದೇಶನ ಬಂದ ಮೇಲೆ ಜಾತಿ ಗಣತಿ ವರದಿ ಬಿಡುಗಡೆ ಮಾಡಿದ್ದಾರೆ. ಇದನ್ನು ಬಿಡುಗಡೆ ಮಾಡಲು 10 ವರ್ಷ ಬೇಕಾಯಿತೇ?’ ಎಂದು ಪ್ರಶ್ನಿಸಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರಲ್ಲಿ ಸಾಕಷ್ಟು ಆಕ್ರೋಶವಿದೆ. ಈಗ ಅದು ಹೊರಬರುತ್ತಿದ್ದು, ಮುಂದಿನ ದಿನಗಳಲ್ಲಿ ಜನರು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಬರಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.