ADVERTISEMENT

ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: CM ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2025, 13:52 IST
Last Updated 30 ಏಪ್ರಿಲ್ 2025, 13:52 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ‘ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಜನಗಣತಿಯೊಂದಿಗೆ ಜಾತಿ ಗಣತಿ ನಡೆಸುವ ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿರುವ ಅವರು, ‘ಕರ್ನಾಟಕದಲ್ಲಿ ಕೇವಲ ಜಾತಿ ಗಣತಿ ನಡೆಸದೆ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇನೆ’ ಎಂದಿದ್ದಾರೆ.

ADVERTISEMENT

‘ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಹೇಳುತ್ತಾ ಬಂದಿರುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ಜಾತಿ ಗಣತಿ ಜೊತೆಯಲ್ಲಿ ಮೀಸಲಾತಿ ಮಿತಿ ಏರಿಕೆಯ ನಿರ್ಧಾರವನ್ನು ಸಂಪೂರ್ಣ ಬೆಂಬಲಿಸಿ ಅದನ್ನು ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ರೂಪಿಸಿ ದೇಶದಾದ್ಯಂತ ಪ್ರಚಾರ ಮಾಡುತ್ತಾ ಬಂದ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಅವರ ಅವಿರತ ಪ್ರಯತ್ನದ ಒತ್ತಡದಿಂದಾಗಿಯೇ ಇಂದು ಪ್ರಧಾನಿ ನರೇಂದ್ರ ಮೋದಿಯವರು ಜಾತಿ ಗಣತಿ ನಡೆಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನುವುದನ್ನು ಅವರು ಒಪ್ಪಿಕೊಳದೆ ಇರಬಹುದು, ಆದರೆ ದೇಶ ಖಂಡಿತಾ ಒಪ್ಪುತ್ತದೆ’ ಎಂದು ಹೇಳಿದ್ದಾರೆ.

ಜಾತಿ ಗಣತಿಯನ್ನು ಟೀಕಿಸಿದ್ದ ಬಿಜೆಪಿ ಈಗ ಒಪ್ಪಿಕೊಂಡಿದೆ

‘ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಭಾರತೀಯ ಜನತಾ ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ’ ಎಂದಿದ್ದಾರೆ.

‘ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ ಎನ್ನುವುದು ವಾಸ್ತವ. ಜಾತಿ ಇಲ್ಲ ಎನ್ನುವುದು ಆತ್ಮವಂಚನೆ. ಜಾತಿ ಎನ್ನುವ ವಾಸ್ತವವನ್ನು ಒಪ್ಪಿಕೊಳ್ಳುವ ಮೂಲಕವೇ ಅದರ ನಾಶಕ್ಕೆ ಪ್ರಯತ್ನಿಸಬೇಕಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವ ಮೂಲಕವೇ ಜಾತಿನಾಶ ಸಾಧ್ಯ ಎಂದು ನಾನುಬಲವಾಗಿ ನಂಬಿದವನು’ ಎಂದು ಹೇಳಿದ್ದಾರೆ.

‘ಕರ್ನಾಟಕದಲ್ಲಿ ನಾವು ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಇದನ್ನು ಬಿಜೆಪಿಯ ರಾಜ್ಯ ಘಟಕ ನಾನಾ ಸಬೂಬುಗಳನ್ನು ಮುಂದೊಡ್ಡಿ ವಿರೋಧಿಸುತ್ತಿದೆ. ಈ ಸಮೀಕ್ಷೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿಯನ್ನು ಪರಿಷ್ಕರಿಸಿ ಈಗಿನ ಶೇ 50ರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಈ ಎಲ್ಲ ಪ್ರಯತ್ನಗಳಿಗೆ ಅಡ್ಡಗಾಲು ಹಾಕುತ್ತಿರುವ ಬಿಜೆಪಿಯ ರಾಜ್ಯಘಟಕದ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಿವಿ ಹಿಂಡಿ ಬುದ್ದಿ ಹೇಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ.

‘ನಮ್ಮ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಲೇ ಕೊನೆಗೆ ಅದನ್ನು ತಮ್ಮ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡ ರೀತಿಯಲ್ಲಿಯೇ ಇದೀಗ ನಮ್ಮ ಜಾತಿಗಣತಿ ಕಾರ್ಯಕ್ರಮವನ್ನು ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೈಗೆತ್ತಿಕೊಂಡಿರುವುದು ಕಾಂಗ್ರೆಸ್ ಪಕ್ಷದ ನೀತಿ ಮತ್ತು ಕಾರ್ಯಕ್ರಮಗಳು ಜನಪರವಾಗಿರುವುದಕ್ಕೆ ಸಾಕ್ಷಿಯಾಗಿದೆ. ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಒಂದು ಪರಿಪೂರ್ಣ ಮಾದರಿಯಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಸಲಹೆ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧ ಇದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.