ಹೈಕೋರ್ಟ್
ಬೆಂಗಳೂರು: ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಸಮೀಕ್ಷೆಯ ಕಾನೂನು ಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಮಧ್ಯಂತರ ಆದೇಶದ ಮೇಲಿನ ವಿಚಾರಣೆಯನ್ನು ಗುರುವಾರ ಮುಕ್ತಾಯಗೊಳಿಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತು ಆದೇಶಿಸಿದೆ.
‘ಸಮೀಕ್ಷೆಯಲ್ಲಿ ಜನರು ಭಾಗವಹಿಸುವುದು ಕಡ್ಡಾಯವಲ್ಲ. ಸಂಗ್ರಹಿಸಿದ ದತ್ತಾಂಶ ಸೋರಿಕೆಯಾಗದಂತೆ ಗೋಪ್ಯತೆ ಕಾಯ್ದುಕೊಳ್ಳಬೇಕು ಮತ್ತು ಈ ಸಂಬಂಧ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಬೇಕು’ ಎಂದೂ ನ್ಯಾಯಪೀಠ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ನಿರ್ದೇಶಿಸಿದೆ.
‘ಸಮೀಕ್ಷೆಯಲ್ಲಿ ಜನರು ಸ್ವಯಂಪ್ರೇರಿತವಾಗಿ ಭಾಗವಹಿಸಬಹುದು. ಅಲ್ಲಿ ಯಾವುದೇ ಮಾಹಿತಿಯನ್ನು ನೀಡುವುದು ಕಡ್ಡಾಯವಲ್ಲ ಎಂಬುದರ ಸಂಬಂಧ ಆಯೋಗ ಹೊರಡಿಸುವ ಅಧಿಸೂಚನೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ದತ್ತಾಂಶ ಸಂಗ್ರಹಿಸಲು ಮನೆಮನೆಗೆ ತೆರಳುವ ಸಮೀಕ್ಷಕರು, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ ಎಂಬುದನ್ನು ಜನರಿಗೆ ಮನದಟ್ಟು ಮಾಡಬೇಕು. ಒಂದೊಮ್ಮೆ ಸಮೀಕ್ಷೆಯಲ್ಲಿ ಜನರು ಭಾಗವಹಿಸಲು ನಿರಾಕರಿಸಿದರೆ, ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಜನರನ್ನು ಪುಸಲಾಯಿಸುವಂತಿಲ್ಲ’ ಎಂದು ನ್ಯಾಯಪೀಠ ತಾಕೀತು ಮಾಡಿದೆ.
ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿದೆ.
ಸಮೀಕ್ಷೆ ನಡೆಸುವುದಕ್ಕಾಗಿ ಕಳೆದ ತಿಂಗಳ 13ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್. ರಘುನಾಥ್, ಅಖಿಲ ಭಾರತ ವೀರಶೈವ ಮಹಾಸಭೆಯ ಬಿ.ಆರ್.ಉದಯಶಂಕರ್ ಸೇರಿದಂತೆ 9 ಜನರು, ರಾಜ್ಯ ಒಕ್ಕಲಿಗರ ಸಂಘದ ಕಾರ್ಯದರ್ಶಿ ಮತ್ತು ಕೆ.ಎನ್.ಸುಬ್ಬಾರೆಡ್ಡಿ ಸೇರಿದಂತೆ ನಾಲ್ವರು ಪ್ರತ್ಯೇಕವಾಗಿ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಸಮೀಕ್ಷಾ ಪ್ರಕ್ರಿಯೆ ತಡೆಯುವುದು ಸೂಕ್ತ ಎನಿಸುವುದಿಲ್ಲ. ಆದರೆ ಆಯೋಗವು ಸಂಗ್ರಹಿಸಿದ ದತ್ತಾಂಶವನ್ನು ಯಾರಿಗೂ ಬಹಿರಂಗಪಡಿಸಬಾರದು. ಅದನ್ನು ಸಂರಕ್ಷಿಸಿ ಗೋಪ್ಯವಾಗಿಡಬೇಕುವಿಭು ಬಖ್ರು ಮುಖ್ಯ ನ್ಯಾಯಮೂರ್ತಿ
ದತ್ತಾಂಶ ರಕ್ಷಣೆಯ ಜವಾಬ್ದಾರಿಯನ್ನು ಇ-ಆಡಳಿತ ಇಲಾಖೆಗೆ ವಹಿಸಲಾಗಿದೆ. ಇದಕ್ಕೆ ಪೂರಕವಾಗಿ ಪ್ರಮಾಣಪತ್ರ ಸಲ್ಲಿಸಲಾಗುವುದುಕೆ.ಶಶಿಕಿರಣ ಶೆಟ್ಟಿ ಅಡ್ವೊಕೇಟ್ ಜನರಲ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.