ಹೈಕೋರ್ಟ್
ಬೆಂಗಳೂರು: ‘ಮೀಸಲು ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದ ಅಭ್ಯರ್ಥಿಯ ಜಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗುವ ಅರ್ಜಿಗಳ ವಿಚಾರಣೆ ನಡೆಸಿ ತೀರ್ಮಾನ ಹೊರಡಿಸುವ ಹೈಕೋರ್ಟ್‌ನ, ಚುನಾವಣಾ ತಕರಾರು ಅರ್ಜಿ ವಿಚಾರಣೆಯ ಅಧಿಕಾರಕ್ಕೆ; ಕರ್ನಾಟಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು ಹಾಗೂ ಇತರೆ ಹಿಂದುಳಿದ ವರ್ಗಗಳ (ನೇಮಕಾತಿ ಮೀಸಲಾತಿ ಇತ್ಯಾದಿ) ಕಾಯ್ದೆ–1990 ಅಡ್ಡಿ ಉಂಟು ಮಾಡುವುದಿಲ್ಲ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ದಾವಣಗೆರೆ ಜಿಲ್ಲೆಯ ಜಗಳೂರು ವಿಧಾನಸಭೆ ಕ್ಷೇತ್ರಕ್ಕೆ 2023ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಬಿ.ದೇವೇಂದ್ರಪ್ಪ ಆಯ್ಕೆ ಆಗಿರುವುದನ್ನು ಪ್ರಶ್ನಿಸಿ; ಇದೇ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿರುವ ಎಚ್.ಡಿ.ಕೋಟೆ ತಾಲ್ಲೂಕಿನ ಬಸವನಗಿರಿ ಹಾಡಿಯ ಜಿ.ಸ್ವಾಮಿ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ನಿರ್ಣಯ ವ್ಯಕ್ತಪಡಿಸಿದೆ.
ಪ್ರಕರಣದಲ್ಲಿ ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಪೀಠ, ‘ಅಭ್ಯರ್ಥಿಯ ಜಾತಿಗೆ ಸಂಬಂಧಿಸಿದ ವಿವಾದವನ್ನು ಹೈಕೋರ್ಟ್‌ನ ಚುನಾವಣಾ ತಕರಾರು ಅರ್ಜಿಗಳ ವಿಚಾರಣಾ ವ್ಯಾಪ್ತಿಯಲ್ಲಿ ನಿರ್ಧರಿಸಬಹುದಾಗಿದೆ. ಆದ್ದರಿಂದ ಪ್ರಜಾಪ್ರತಿನಿಧಿ ಕಾಯ್ದೆ–1951ರ ಅಡಿ ಹೈಕೋರ್ಟ್‌ಗೆ ನೀಡಲಾದ ಅಧಿಕಾರ ವ್ಯಾಪ್ತಿಯನ್ನು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ (ಡಿಸಿವಿಸಿ) ನಿರ್ಧಾರದಂತೆ ಪರಿಗಣಿಸಲು ಸಾಧ್ಯವಿಲ್ಲ’ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.