ಕಾವೇರಿ ನದಿ
ನವದೆಹಲಿ: ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಜಲಾಶಯಗಳಲ್ಲಿ ಈ ಸಲ ನೀರಿನ ಸಂಗ್ರಹ ಸಾಕಷ್ಟು ಇದೆ. ಹೀಗಾಗಿ, ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕುಡಿಯುವ ನೀರು, ಪರಿಸರ ಹಾಗೂ ಕೈಗಾರಿಕಾ ಬಳಕೆಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ‘ನಾಲ್ಕು ಜಲಾಶಯಗಳಲ್ಲಿ ನೀರಿನ ಒಟ್ಟು ಸಂಗ್ರಹ 104 ಟಿಎಂಸಿ ಅಡಿ. ಪ್ರಸ್ತುತ 59.26 ಟಿಎಂಸಿ ಅಡಿಯಷ್ಟು ನೀರಿದೆ. ಬೇಸಿಗೆ ಅಂತ್ಯದ ವರೆಗೆ ನೀರಿನ ಕೊರತೆ ಆಗುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಅಂತರ್ಜಲ ಸಂರಕ್ಷಣೆ ರಾಜ್ಯ ಸರ್ಕಾರದ ಜವಾಬ್ದಾರಿ. ಅಂತರ್ಜಲ ಅತಿ ಬಳಕೆಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರವು ಕಾಯ್ದೆ ಅನುಷ್ಠಾನಗೊಳಿಸಿದೆ. ನಿಯಮ ಉಲ್ಲಂಘಿಸಿದವರಿಗೆ ₹5 ಸಾವಿರ ದಂಡ ಹಾಗೂ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲು ಅವಕಾಶ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದ ಜಲಾಶಯಗಳಲ್ಲಿ ಪ್ರಸ್ತುತ ಎಷ್ಟು ನೀರಿನ ಸಂಗ್ರಹವಿದೆ ಎಂದು ಸುಧಾಕರ್ ಪ್ರಶ್ನೆ ಕೇಳಿದ್ದರು. ನಾಲ್ಕು ಜಲಾಶಯಗಳ ಮಾಹಿತಿಯನ್ನಷ್ಟೇ ಸಚಿವರು ಒದಗಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.