ADVERTISEMENT

ಕಾವೇರಿ ಪ್ರಾಧಿಕಾರ ಆದೇಶ ರದ್ದುಪಡಿಸಬೇಕು ಎಂದು ಕೋರಿ ಕೇಂದ್ರಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2023, 13:36 IST
Last Updated 9 ಅಕ್ಟೋಬರ್ 2023, 13:36 IST
<div class="paragraphs"><p>ಕಾವೇರಿ ನದಿ</p></div>

ಕಾವೇರಿ ನದಿ

   

ನವದೆಹಲಿ: ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯೂಸೆಕ್‌ ನೀರು ಹರಿಸಬೇಕು ಎಂಬ 'ಕಾವೇರಿ ನೀರು ನಿರ್ವಹಣಾ ಮಂಡಳಿಯ' ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಅವರಿಗೆ ಸೋಮವಾರ ಮನವಿ ಸಲ್ಲಿಸಿತು. 

‘ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ. ಬರಗಾಲಕ್ಕೆ 195 ತಾಲ್ಲೂಕುಗಳು ತುತ್ತಾಗಿ 250ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ, ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿದೆ. ಇದನ್ನು ಕೂಡಲೇ ನಿಲ್ಲಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ADVERTISEMENT

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿಯು ರಾಜಕೀಯ ಪಕ್ಷಗಳ ಒತ್ತಡಕ್ಕೆ ಒಳಗಾಗಿ ಕಾರ್ಯನಿರ್ವಹಿಸುತ್ತಿದೆ. ಅದನ್ನು ರದ್ದುಪಡಿಸಬೇಕು. ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಪ್ರಾಧಿಕಾರ ಹಾಗೂ ಸಮಿತಿ ರಚಿಸಬೇಕು’ ಎಂದು ಆಗ್ರಹಿಸಲಾಗಿದೆ.

ನೀರಿನಲ್ಲಿ ಪಾಲು ಕೇಳುವ ತಮಿಳುನಾಡಿನವರು ಅರಣ್ಯ ಸಂರಕ್ಷಣೆ ಮಾಡಲು ಕರ್ನಾಟಕ ಸರ್ಕಾರಕ್ಕೆ ವರ್ಷಕ್ಕೆ ₹2,000 ಕೋಟಿ ಹಣ ನೀಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಆಗ್ರಹಿಸಲಾಗಿದೆ. ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಕೂಡಲೇ ಒಪ್ಪಿಗೆ ನೀಡಬೇಕು ಎಂದು ಒತ್ತಾಯಿಸಲಾಗಿದೆ. 

ನಿಯೋಗದಲ್ಲಿ ಸಮಿತಿಯ ಸಂಚಾಲಕ ಕುರುಬೂರು ಶಾಂತಕುಮಾರ್, ಮುಖಂಡರಾದ ಗುರುದೇವ್ ನಾರಾಯಣ್, ಮೋಹನ್ ದಾಸರಿ ಹಾಗೂ ವಿಜಯ ಸಿಂಗ್‌ ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.