ADVERTISEMENT

ಡಿ.ಕೆ. ಶಿವಕುಮಾರ್ ಪ್ರಕರಣ: ಸಿಬಿಐಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2022, 20:45 IST
Last Updated 1 ಆಗಸ್ಟ್ 2022, 20:45 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್   

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಕೋರಿದ ಪ್ರಕರಣದಲ್ಲಿ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

’ನನ್ನ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್‌ ರದ್ದುಗೊಳಿಸಬೇಕು’ ಎಂದು ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಸುನಿಲ್ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಬಿ.ವಿ.ಆಚಾರ್ಯ ಮತ್ತು ಸಿ.ಎಚ್.ಜಾಧವ್‌, ‘ಅರ್ಜಿದಾರರ ವಿರುದ್ಧ 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆ–1988ರ ಕಲಂ 13 (2), 13 (1)(ಇ) ಅಡಿಯಲ್ಲಿ ದಾಖಲಿಸಲಾಗಿರುವ ಎಫ್‌ಐಆರ್‌ ಕಾನೂನು ಬಾಹಿರವಾಗಿದೆ’ ಎಂದು ಬಲವಾಗಿ ಆಕ್ಷೇಪಿಸಿದರು.

ADVERTISEMENT

‘ಅರ್ಜಿದಾರರುಕೃಷಿ ಕುಟುಂಬದವರಾಗಿದ್ದು, 1989ರಿಂದ ವಿಧಾನಸಭೆ ಸದಸ್ಯನಾಗಿ ಒಟ್ಟು ಏಳು ಬಾರಿ ಆಯ್ಕೆಯಾದ ಸಾರ್ವಜನಿಕ ಸೇವಕರಾಗಿದ್ದಾರೆ. ಈ ಪ್ರಕರಣದಲ್ಲಿ ಅವರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಕುಟುಂಬದ ಸದಸ್ಯರ ಹೆಸರನ್ನೂ ಸೇರ್ಪಡೆ ಮಾಡಿರುವುದು ತಪ್ಪು’ ಎಂದರು.

‘ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಗಳಲ್ಲಿ ಅನುಸರಿಸಬೇಕಾದ ನಿಯಮಗಳು ಮತ್ತು ಎಫ್‌ಐಆರ್‌ ದಾಖಲಿಸುವ ಮುನ್ನಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕಲಂ 17 ‘ಎ‘ ಅನುಸಾರ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆದಿಲ್ಲ. ಪರಿಶೀಲನಾ ಅವಧಿಯಲ್ಲಿನ (ಚೆಕ್‌ ಪೀರಿಯಡ್‌) ಅರ್ಜಿದಾರರ ಆದಾಯ, ಆಸ್ತಿ ಮತ್ತು ವೆಚ್ಚದ ಹೇಳಿಕೆಯ ವಿವರಗಳನ್ನೂ ನಮೂದಿಸಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.