ADVERTISEMENT

ಸಚಿನ್ ಪಾಂಚಾಳ್ ಆತ್ಮಹತ್ಯೆ ಕುರಿತು ಸಿಬಿಐ ತನಿಖೆ ಆಗಲಿ: BY ವಿಜಯೇಂದ್ರ ಒತ್ತಾಯ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2024, 9:18 IST
Last Updated 30 ಡಿಸೆಂಬರ್ 2024, 9:18 IST
<div class="paragraphs"><p>ವಿಜಯೇಂದ್ರ</p></div>

ವಿಜಯೇಂದ್ರ

   

ಬೆಂಗಳೂರು: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ನ್ಯಾಯಕ್ಕಾಗಿ ಸಿಬಿಐ ತನಿಖೆ ಆಗಬೇಕು ಎಂದು ಸಚಿನ್ ಕುಟುಂಬವೂ ಒತ್ತಾಯಿಸಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

‘ಹಿಂದೆ, ಇದೇ ಸರಕಾರದ ಸಚಿವ ನಾಗೇಂದ್ರ ಅವರೂ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ರಾಜೀನಾಮೆ ಕೊಟ್ಟಿದ್ದಾರೆ. ಒಂದು ಕ್ಷಣವೂ ತಡ ಮಾಡದೆ, ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದುಕೊಳ್ಳಿ. ಯಾರನ್ನೋ ಉಳಿಸುವ, ರಕ್ಷಿಸುವ ದುಸ್ಸಾಹಸ ಬೇಡ’ ಎಂದು ಅವರು ಎಚ್ಚರಿಸಿದರು.

ಮೇಧಾವಿ ಪ್ರಿಯಾಂಕ್ ಖರ್ಗೆಯವರಿಗೆ ಮರೆವು ಜಾಸ್ತಿ. ಹಿಂದೆ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದನ್ನು ಪ್ರಿಯಾಂಕ್ ಮರೆಯಬಾರದು. ಮಡಿಕೇರಿಯಲ್ಲಿ ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಅಂದಿನ ಗೃಹ ಸಚಿವ ಜಾರ್ಜ್ ಅವರು ಕೂಡ ರಾಜೀನಾಮೆ ಕೊಟ್ಟು, ಸಿಬಿಐ ತನಿಖೆ ಆಗಿ ಕ್ಲೀನ್ ಚಿಟ್ ಬಂದಿತ್ತು’ ಎಂದು ಅವರು ಗಮನ ಸೆಳೆದರು.

ಸಚಿನ್ ಅವರ ಕುಟುಂಬಕ್ಕೆ ತಕ್ಷಣದಿಂದ ಭದ್ರತೆ ಕೊಡಬೇಕು. ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕು. ಕುಟುಂಬದ ಒಬ್ಬರು ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಒತ್ತಾಯಿಸಿದರು.

ಸಿದ್ಧಲಿಂಗ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿಮೂಡ, ಕಲಬುರ್ಗಿಯ ಬಿಜೆಪಿ ನಾಯಕರಾದ ಚಂದುಪಾಟೀಲ, ಮಣಿಕಂಠ ರಾಠೋಡ್ ಅವರ ಕೊಲೆಗೆ ಸಂಚು ರೂಪಿಸಿದ್ದಾಗಿ ಮರಣ ಪತ್ರ ತಿಳಿಸಿದೆ. ಸಿದ್ಧಲಿಂಗ ಸ್ವಾಮೀಜಿ ಅವರ ಧ್ವನಿ ಅಡಗಿಸಲು ಮಹಾರಾಷ್ಟ್ರದ ಸುಪಾರಿ ಹಂತಕರನ್ನು ಬಳಸುವ ವಿಚಾರವೂ ಮರಣ ಪತ್ರದಲ್ಲಿದೆ. ಹಾಗಾಗಿ ಇದೊಂದು ಗಂಭೀರ ವಿಚಾರ. ಆದ್ದರಿಂದ ಇದರ ಬಗ್ಗೆಯೂ ಸಿಬಿಐ ತನಿಖೆ ಅತ್ಯಗತ್ಯ ಎಂದರು. ರಾಜ್ಯದ ಪೊಲೀಸ್ ಇಲಾಖೆಯಿಂದ ಅಂಥ ಶಕ್ತಿಶಾಲಿ ಖರ್ಗೆ ಕುಟುಂಬದ ವಿರುದ್ಧ ತನಿಖೆ ಮಾಡಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ತಿಳಿಸಿದರು.

ಪ್ರಿಯಾಂಕ್ ಖರ್ಗೆ ಸರ್ವ ಇಲಾಖೆಯ ಸಚಿವರು

ಪ್ರಿಯಾಂಕ್ ಖರ್ಗೆಯವರ ಇಲಾಖೆ ಗ್ರಾಮೀಣಾಭಿವೃದ್ಧಿ ಮತ್ತು ಐಟಿ, ಬಿಟಿ ಮಾತ್ರವಲ್ಲ; ಅವರು ಸರ್ವ ಇಲಾಖೆಯ ಸಚಿವರು. ಸದನದಲ್ಲಿ ಗೃಹ ಸಚಿವರಿದ್ದರೂ, ಸಿಎಂ ಕುರಿತು ಪ್ರಶ್ನೆ ಇದ್ದರೂ ಅವರ ಪರವಾಗಿ ಇವರು ಎದ್ದೇಳುತ್ತಾರೆ; ಗಲಾಟೆ ಮಾಡುತ್ತಾರೆ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಪ್ರಿಯಾಂಕ್ ಖರ್ಗೆ ಅವರು ಬಹಳ ಜ್ಞಾನಿ, ಮೇಧಾವಿ, ಬುದ್ಧಿವಂತರು, ಅಷ್ಟೇ ಪ್ರಭಾವಿ, ಶಕ್ತಿಶಾಲಿ ಮುಖಂಡ ಎಂದು ತಿಳಿಸಿದರು. ಯಡಿಯೂರಪ್ಪ ಅವರ ಪೋಸ್ಕೊ ಕೇಸನ್ನು ಮುಚ್ಚಿಹಾಕಲು ಎಂಬ ಮಾತನ್ನು ಪ್ರಿಯಾಂಕ್ ಖರ್ಗೆಯವರು ಹೇಳಿದ್ದು, ಅವರು ಸುಪ್ರೀಂ ಕೋರ್ಟೇ, ಹೈಕೋರ್ಟೇ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.