
ಬೆಂಗಳೂರು: ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ರೂಪಾಯಿ ದುರ್ಬಳಕೆ ಪ್ರಕರಣದ ಆರೋಪಿ ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ನೆಕ್ಕುಂಟಿ ನಾಗರಾಜ್ ವಿರುದ್ಧ ಗುರುವಾರದ (ಫೆ.5) ತನಕ ಆತುರದ ಕ್ರಮ ಜರುಗಿಸಬಾರದು’ ಎಂದು ಹೈಕೋರ್ಟ್ ಸಿಬಿಐಗೆ ನಿರ್ದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ ಸಿಬಿಐ ಅರ್ಜಿ ಹಾಗೂ ನಿರೀಕ್ಷಣಾ ಜಾಮೀನು ಕೋರಿರುವ ನೆಕ್ಕುಂಟಿ ನಾಗರಾಜ್ ಅವರ ಎರಡು ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ನೆಕ್ಕುಂಟಿ ಪರ ಪದಾಂಕಿತ ಹಿರಿಯ ವಕೀಲ ಹಷ್ಮತ್ ಪಾಷ ಅವರು, ‘ನಾಗೇಂದ್ರ ಅವರಿಗೆ ಜಾಮೀನು ನೀಡಲಾಗಿದೆ. ಹಾಗಾಗಿ, ನೆಕ್ಕುಂಟಿ ಅವರಿಗೂ ಜಾಮೀನು ಮಂಜೂರು ಮಾಡಬೇಕು’ ಎಂದು ಕೋರಿದರು.
ಇದಕ್ಕೆ ಪ್ರತಿಯಾಗಿ ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್, ‘ತನಿಖೆಗೆ ನೆಕ್ಕುಂಟಿ ಬಂಧನ ಅನಿವಾರ್ಯವಾಗಿದ್ದು ಅರ್ಜಿದಾರರ ಮನವಿಯನ್ನು ಪುರಸ್ಕರಿಸಬಾರದು’ ಎಂದು ಮನವಿ ಮಾಡಿದರು.
ಅಂತಿಮವಾಗಿ ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ‘ನೆಕ್ಕುಂಟಿ ಅವರ ವಿರುದ್ಧ ಯಾವುದೇ ಆತುರದ ಕ್ರಮ ಜರುಗಿಸಬಾರದು ಮತ್ತು ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಎಂದು ನೆಕ್ಕುಂಟಿ ನಾಗರಾಜ್ ಅವರಿಗೆ ತಾಕೀತು ಮಾಡಿತು. ಅಂತೆಯೇ, ನೆಕ್ಕುಂಟಿ ವಿರುದ್ಧ ಆತುರದ ಕ್ರಮ ಬೇಡ ಎಂದು ಸಿಬಿಐಗೆ ನಿರ್ದೇಶಿಸಿ ವಿಚಾರಣೆಯನ್ನು ಇದೇ 5ಕ್ಕೆ ಮುಂದೂಡಿತು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನು ರದ್ದುಪಡಿಸುವಂತೆ ಕೋರಿ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ಗೆ ಗುರುವಾರಕ್ಕೆ ಮುಂದೂಡಿದೆ.
ಅರ್ಜಿದಾರರ ವಿರುದ್ಧ ವಂಚನೆ, ಫೋರ್ಜರಿ, ನಂಬಿಕೆ ದ್ರೋಹ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಅಪರಾಧಿಕ ದುರ್ನಡತೆ ಮತ್ತು ಅಧಿಕಾರ ದುರ್ಬಳಕೆ ಆರೋಪಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.