ADVERTISEMENT

ಜಾತಿ ಗಣತಿ ವರದಿ: ಸರ್ಕಾರ ಯೂಟರ್ನ್

ಇಂದಿನ ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡನೆ ಇಲ್ಲ; ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 15 ಜನವರಿ 2025, 15:31 IST
Last Updated 15 ಜನವರಿ 2025, 15:31 IST
<div class="paragraphs"><p> ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ನವದೆಹಲಿ: ಕರ್ನಾಟಕದ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳ ಒತ್ತಡಕ್ಕೆ ಮಣಿದಿರುವ ರಾಜ್ಯದ ಕಾಂಗ್ರೆಸ್‌ ಸರ್ಕಾರವು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015’ (ಜಾತಿ ಗಣತಿ) ವರದಿಯನ್ನು ಮಂಡಿಸದಿರಲು ತೀರ್ಮಾನಿಸಿದೆ. 

ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಈ ವರದಿಯನ್ನು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯ ಮುಂದಿಟ್ಟು, ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿತ್ತು. ಮುಂದಿನ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದೆ ತಿಳಿಸಿದ್ದರು. ಸಂಪುಟ ಸಭೆಯ ಕಾರ್ಯಸೂಚಿಯಲ್ಲಿ ಈ ವಿವರ ನೀಡಲಾಗಿತ್ತು.

ADVERTISEMENT

ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಲೇಬಾರದು ಎಂದು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳು ಪಟ್ಟು ಹಿಡಿದಿವೆ. ‘ಇದೊಂದು ಅವೈಜ್ಞಾನಿಕ ವರದಿ. ಅಂಕಿ ಅಂಶಗಳು ಊಹಾಪೋಹದಿಂದ ಕೂಡಿವೆ. ಈ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು’ ಎಂದು ಒಕ್ಕಲಿಗ ಹಾಗೂ ಲಿಂಗಾಯತ ಸಂಘಟನೆಗಳು ಒತ್ತಾಯಿಸಿದ್ದವು. ಈ ವರದಿ ಮಂಡನೆಗೆ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳ ಸಚಿವರ ವಿರೋಧವೂ ಇದೆ.

ಬುಧವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಸಿದ್ದರಾಮಯ್ಯ, ‘ಜಾತಿ ಗಣತಿ ವರದಿಯಲ್ಲಿರುವ ಅಂಕಿ ಅಂಶಗಳು ಇನ್ನೂ ಬಹಿರಂಗಗೊಂಡಿಲ್ಲ. ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ಸಂಪುಟ ಸಭೆಯಲ್ಲಿ ವರದಿ ಮಂಡಿಸಲು ತೀರ್ಮಾನಿಸಲಾಗಿತ್ತು. ಆದರೆ, ಗುರುವಾರದ ಸಭೆಯಲ್ಲಿ ಈ ವರದಿಯನ್ನು ಮಂಡಿಸುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು. 

ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ₹160 ಕೋಟಿ ವೆಚ್ಚ ಮಾಡಿ ಈ ಸಮೀಕ್ಷೆ ನಡೆಸಲಾಗಿತ್ತು. ರಾಜ್ಯದ ಮನೆ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ನ್ಯಾಯಮೂರ್ತಿ ಎಚ್‌. ಕಾಂತರಾಜ ಆಯೋಗ ತಿಳಿಸಿತ್ತು. ಕಾಂಗ್ರೆಸ್‌ ಸರ್ಕಾರ ಈ ವರದಿಯನ್ನು ಸ್ವೀಕರಿಸಿರಲಿಲ್ಲ. 

ಸುದ್ದಿಗಾರರ ಜತೆಗೆ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್, ‘ಜಾತಿ ಗಣತಿ ಮಾಡುತ್ತೇವೆ ಎಂದು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೇವೆ. ನಮ್ಮ ನಾಯಕ ರಾಹುಲ್‌ ಗಾಂಧಿ ಅದನ್ನೇ ಹೇಳಿದ್ದಾರೆ. ಮುಖ್ಯಮಂತ್ರಿಯವರು ಯಾವ ಸಂದರ್ಭದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡೋಣ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.