ADVERTISEMENT

ನರೇಗಾ ಅಡಿ ತುರ್ತು ಕಾಮಗಾರಿ ಆರಂಭಿಸಲು ಕೇಂದ್ರದ ಸೂಚನೆ: ಕಾರಜೋಳ

ಕೊರೊನಾ ಹರಡುವಿಕೆ ನಿರ್ಬಂಧಗಳಿಂದ ಗ್ರಾಮೀಣ ಕೂಲಿಕಾರ್ಮಿಕರಿಗೆ ತೊಂದರೆ ಹಿನ್ನೆಲೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 10:24 IST
Last Updated 21 ಮಾರ್ಚ್ 2020, 10:24 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಬಾಗಲಕೋಟೆ: ಮಹಾತ್ಮ ಗಾಂಧೀಜಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತುರ್ತಾಗಿ ಕಾಮಗಾರಿಗಳನ್ನು ಆರಂಭಿಸಿ ಕೇಳಿದ ಎಲ್ಲರಿಗೂ ಕೆಲಸ ಕೊಡುವಂತೆ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ವಿಧಿಸಿರುವ ನಿರ್ಬಂಧಗಳಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ದುಡಿದು ತಿನ್ನುವವರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೊರೊನಾ ವೈರಸ್ ಸೋಂಕು ತಡೆಗಟ್ಟುವಿಕೆ ಕಾರ್ಯಕ್ರಮಗಳಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ಡಿಆರ್ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಕೋಶದ (ಎಸ್ಡಿಆರ್ಎಫ್) ಖಾತೆಗಳಲ್ಲಿರುವ ಹಣ ಬಳಕೆ ಮಾಡಿಕೊಳ್ಳುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ADVERTISEMENT

ಮುಂಜಾಗರೂಕತಾ ಕ್ರಮವಾಗಿ ರಾಜ್ಯದಲ್ಲಿ ಸಾಮೂಹಿಕ ಪ್ರಾರ್ಥನೆ, ಸಭೆಗಳಿಗೆ ನಿಷೇಧ ಹೇರಲಾಗಿದೆ. ಆದರೂ ನಿರ್ಬಂಧಗಳನ್ನು ಲೆಕ್ಕಿಸದೇ ಕೆಲವು ಕಡೆ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಹೀಗಾಗಿ ಯಾವುದೇ ಧರ್ಮದವರಾದರೂ ಸರಿ ಸಾಮೂಹಿಕ ಪ್ರಾರ್ಥನೆ ನಡೆಸದಂತೆ ಸಂಬಂಧಿಸಿದವರಿಗೆ ನೋಟಿಸ್ ಕೊಡಿ, ಅದಕ್ಕೆ ಮನ್ನಣೆ ನೀಡದಿದ್ದರೆ ಕಾನೂನು ಕ್ರಮ ಜರುಗಿಸಿ ಎಂದು ಆಯಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.