ADVERTISEMENT

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ: ಸುರ್ಜೇವಾಲ ತರಾಟೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2024, 22:34 IST
Last Updated 3 ಜನವರಿ 2024, 22:34 IST
<div class="paragraphs"><p>ಬರ</p></div>

ಬರ

   

ಬೆಂಗಳೂರು: ‘ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಿರುವ ಬರ ಪರಿಹಾರ ಮತ್ತು ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡಬೇಕು’ ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

‘ರಾಜ್ಯ ಸರ್ಕಾರ ₹‌18,177.44 ಕೋಟಿ ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ₹42 ಸಾವಿರ ಕೋಟಿ ಜಿಎಸ್‌ಟಿ ಪಾಲು ಸೇರಿ ಇತರ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ADVERTISEMENT

‘ರಾಜ್ಯದ 236 ತಾಲ್ಲೂಕುಗಳ ಪೈಕಿ 223 ಅನ್ನು ಬರ ಪೀಡಿತ ಎಂದು ಗುರುತಿಸಲಾಗಿದೆ. ಬರದಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರೂ ಸ್ಪಂದಿಸಿಲ್ಲ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ ಅವರನ್ನು ಮತ್ತು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದಾರೆ. ಇಷ್ಟಾದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಇದು ಕೇಂದ್ರ ಸರ್ಕಾರ ನಡೆದುಕೊಳ್ಳುವ ರೀತಿಯೇ’ ಎಂದೂ ಪ್ರಶ್ನಿಸಿದ್ದಾರೆ.

‘ರಾಜ್ಯದಿಂದ ಬಿಜೆಪಿಯಿಂದ ಆಯ್ಕೆಯಾದ 25 ಮತ್ತು ಬಿಜೆಪಿ ಬೆಂಬಲಿತ ಒಬ್ಬ ಸಂಸದರಿದ್ದಾರೆ. ಈ ಎಲ್ಲರೂ ಪ್ರಧಾನಿಯನ್ನು ಭೇಟಿಯಾಗಿ ಅನುದಾನ ಬಿಡುಗಡೆಗೆ ಒತ್ತಡ ಹೇರಬೇಕು’ ಎಂದೂ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.