ADVERTISEMENT

ಟ್ವಿಟರ್‌ ಖಾತೆ ನಿರ್ಬಂಧ: ಕೇಂದ್ರದ ಸಮರ್ಥನೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2022, 7:15 IST
Last Updated 3 ಸೆಪ್ಟೆಂಬರ್ 2022, 7:15 IST
   

ಬೆಂಗಳೂರು:‘ರಾಷ್ಟ್ರೀಯತೆ, ಸಾರ್ವಜನಿಕ ಹಿತದೃಷ್ಟಿ ಕಾಪಾಡುವ, ಗುಂಪು ಘರ್ಷಣೆ ಮತ್ತು ಲಿಂಚಿಂಗ್‌ನಂತಹ (ಗುಂಪು ಹಲ್ಲೆ) ದುಷ್ಕೃತ್ಯಗಳನ್ನು ನಿಯಂತ್ರಿಸುವ ಉದ್ದೇಶದಿಂದ ಕೆಲವು ಖಾತೆಗಳನ್ನು ನಿರ್ಬಂಧಿಸಲು ಟ್ವಿಟರ್‌ಗೆ ಆದೇಶಿಸಲಾಗಿದೆ’ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ.

‘ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ-2000ದ ಕಲಂ 69ಎ ಗೆ ವಿರುದ್ಧವಾಗಿರುವ 1,400ಕ್ಕೂ ಹೆಚ್ಚು ಟ್ವಿಟರ್ ಖಾತೆಗಳನ್ನು ಬ್ಲಾಕ್ ಮಾಡಬೇಕು’ ಎಂಬ ನೋಟಿಸ್‌ಗಳನ್ನು ಪ್ರಶ್ನಿಸಿ ‘ಟ್ವಿಟರ್’ ಕಂಪನಿ ಸಲ್ಲಿಸಿರುವ ರಿಟ್‌ ಅರ್ಜಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಆಕ್ಷೇಪಣೆಯಲ್ಲಿ ಕೇಂದ್ರ ಸರ್ಕಾರ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ.

‘ಸುಳ್ಳು ಸುದ್ದಿ ಹಾಗೂ ಉದ್ದೇಶಪೂರ್ವಕ ಅಸಂಬದ್ಧ ಮಾಹಿತಿಗಳ ಪ್ರಸರಣ ಮತ್ತು ಹಂಚಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಟ್ವಿಟರ್‌ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ. ದೇಶದ ಸಮಗ್ರತೆ, ಸಾರ್ವಭೌಮತೆ, ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಗಳ ಪ್ರಸರಣ ಇಂತಹ ವೇದಿಕೆಗಳಲ್ಲಿ ಹೆಚ್ಚಾಗುತ್ತಿವೆ’ ಎಂದು ಆಕ್ಷೇಪಣೆಯಲ್ಲಿ ತಿಳಿಸಲಾಗಿದೆ.

ADVERTISEMENT

‘ದೇಶ ವಿರೋಧಿ ಮತ್ತು ವಿದೇಶದಲ್ಲಿರುವ ಶತ್ರುಗಳು ಭಾರತ ವಿರೋಧಿ ಅಪಪ್ರಚಾರಕ್ಕೆ ಇಂತಹವುಗಳನ್ನು ವೇದಿಕೆಯನ್ನಾಗಿ ಮಾಡಿಕೊಳ್ಳುತ್ತಿವೆ. ದೇಶದಲ್ಲಿ ಅಸ್ಥಿರತೆ ಉಂಟು ಮಾಡಲು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಏಕತೆಯಲ್ಲಿ ಬಿರುಕು ಮೂಡಿಸಲು ಇವನ್ನು ಬಳಸಿಕೊಳ್ಳಲಾಗುತ್ತಿದೆ. ಆದ್ದರಿಂದ, ಆರಂಭಿಕ ಹಂತದಲ್ಲೇ ಸುಳ್ಳು ಅಥವಾ ತಪ್ಪು ಮಾಹಿತಿಗಳನ್ನು ನಿರ್ಬಂಧಿಸುವುದು ಅಗತ್ಯವಾಗಿದೆ’ ಎಂದು ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.