ADVERTISEMENT

ಮಹದಾಯಿ ಪ್ರಾಧಿಕಾರ ರಚನೆಗೆ ಕೇಂದ್ರ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2023, 22:30 IST
Last Updated 22 ಫೆಬ್ರುವರಿ 2023, 22:30 IST
   

ನವದೆಹಲಿ: ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪನ್ನು ಅನುಷ್ಠಾನಗೊಳಿಸಲು ‘ಮಹದಾಯಿ ‍ಪ್ರವಾಹ್ (ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಶೀಲ ನದಿ ಪ್ರಾಧಿಕಾರ)’ ರಚನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒ‌ಪ್ಪಿಗೆ ನೀಡಿದೆ.

ಈ ಪ್ರಾಧಿಕಾರವು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮಾದರಿಯಲ್ಲೇ ಮಹದಾಯಿ ನ್ಯಾಯಮಂಡಳಿಯ ತೀರ್ಪಿನ ಅನುಸಾರ ರಚನೆಯಾಗಿದೆ. ಈ ಪ್ರಾಧಿಕಾರದ ಮುಖ್ಯ ಉದ್ದೇಶವೆಂದರೆ ಪ್ರಾಧಿಕಾರದ ಅಂತಿಮ ತೀರ್ಪನ್ನು ಅನುಷ್ಠಾನಗೊಳಿಸುವುದು.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌, ‘ಇದು ಜಲವಿವಾದದ ಭಾಗವಾಗಿರುವ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ನಡುವೆ ಪರಸ್ಪರ ನಂಬಿಕೆ ಹಾಗೂ ವಿಶ್ವಾಸದ ನಿರ್ಮಾಣಕ್ಕೆ ನೆರವಾಗಲಿದೆ. ಈ ಮೂಲಕ ಈ ಪ್ರದೇಶಗಳ ಒಟ್ಟಾರೆ ಅಭಿವೃದ್ಧಿಗೆ ಜಲ ಸಂಪನ್ಮೂಲಗಳ ಸಮರ್ಪಕ ಬಳಕೆಯನ್ನು ಖಾತರಿಪಡಿಸುತ್ತದೆ’ ಎಂದು ತಿಳಿಸಿದ್ದಾರೆ.

ADVERTISEMENT

ಈ ನಿರ್ಧಾರವನ್ನು ಸ್ವಾಗತಿಸಿರುವ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಇದು ಕರ್ನಾಟಕದಲ್ಲಿ ಜಲ ಯೋಜನೆಗಳ ಅನುಷ್ಠಾನಕ್ಕೆ ದಾರಿ ಮಾಡಿಕೊಡಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಹದಾಯಿ ನದಿ ನೀರು ವಿವಾದ ನ್ಯಾಯಮಂಡಳಿಯು 2018ರ ಆಗಸ್ಟ್‌ 14ರಂದು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರಕ್ಕೆ 38.74 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿತ್ತು. ‌ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗೆಜೆಟ್‌ ಅಧಿಸೂಚನೆಯನ್ನು ಕೇಂದ್ರ ಜಲಶಕ್ತಿ ಸಚಿವಾಲಯ 2020ರ ಫೆಬ್ರುವರಿ 18ರಂದು ಪ್ರಕಟಿಸಿತ್ತು.

ಮಹಾದಾಯಿ ಯೋಜನೆಯ ಪರಿಷ್ಕೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ 2022ರ ಡಿಸೆಂಬರ್‌ 28ರಂದು ಒಪ್ಪಿಗೆ ನೀಡಿದೆ. ಈ ಯೋಜನೆಗೆ ಗೋವಾ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ. ನ್ಯಾಯಮಂಡಳಿಯ ಅಂತಿಮ ತೀರ್ಪನ್ನು ಗೋವಾ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅದರ ವಿಚಾರಣೆ ಜುಲೈ ತಿಂಗಳಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.