ADVERTISEMENT

ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ: ಸೂಕ್ತ ಕ್ರಮಕ್ಕೆ ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2023, 23:30 IST
Last Updated 20 ಸೆಪ್ಟೆಂಬರ್ 2023, 23:30 IST
<div class="paragraphs"><p>ಹೈಕೋರ್ಟ್‌</p></div>

ಹೈಕೋರ್ಟ್‌

   

ಬೆಂಗಳೂರು: ‘ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ಸೂಕ್ತ ತೀರ್ಮಾನ ಕೈಗೊಳ್ಳಿ‘ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಹೈಕೋರ್ಟ್ ಮೌಖಿಕ ನಿರ್ದೇಶನ ನೀಡಿದೆ.

ಈ ಸಂಬಂಧ ‘ಚಾಮರಾಜಪೇಟೆ ನಾಗರಿಕರ ಒಕ್ಕೂಟ‘ದ ಪರ ಹೈಕೋರ್ಟ್‌ ವಕೀಲ ಶ್ರೀಧರ ಪ್ರಭು ಅರ್ಜಿಯನ್ನು ತುರ್ತಾಗಿ ಪರಿಗಣಿಸುವಂತೆ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಬುಧವಾರ ಮೆಮೊ (ಜ್ಞಾಪನಾ ಪತ್ರ) ಸಲ್ಲಿಸಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಸೆಪ್ಟೆಂಬರ್ 18 ರಂದು ಗಣೇಶ ಚತುರ್ಥಿ ಎಂಬುದು ಬಹಳ ಹಿಂದೆಯೇ ನಿಗದಿಯಾಗಿತ್ತು. ಈಗ ಹಬ್ಬ ಮುಗಿದು ಎರಡು ದಿನಗಳಾಗಿವೆ. ಈ ವಿಚಾರ ನಿಮಗೆ ಗೊತ್ತಿರಲಿಲ್ಲ ಎಂದು ಹೇಳುವಂತಿಲ್ಲ. ಅಧಿಕ ಮಾಸದ ಕಾರಣಕ್ಕೆ ಕೆಲವು ಕಡೆ ಸೆಪ್ಟೆಂಬರ್ 19ಕ್ಕೆ ಹಬ್ಬ ಆಚರಿಸಲಾಗಿದೆಯಲ್ಲಾ‘ ಎಂದು ಪ್ರಶ್ನಿಸಿತು.

ಅರ್ಜಿಯಲ್ಲಿ ಏನಿದೆ?: ‘2023ರ ಸೆಪ್ಟೆಂಬರ್ 22ರಿಂದ 24ರವರೆಗೆ ಸಾರ್ವಜನಿಕ ಗಣೇಶ ಉತ್ಸವ ಆಚರಿಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸೆಪ್ಟೆಂಬರ್ 13ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಒಕ್ಕೂಟದ ಮನವಿಯಂತೆ ನಿಗದಿತ ದಿನಾಂಕದಂದು ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಅನುಮತಿ ನೀಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ನಿರ್ದೇಶಿಸಬೇಕು‘ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.