ADVERTISEMENT

ಮೈಸೂರಿನಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಆಗಸ್ಟ್ 2021, 15:17 IST
Last Updated 25 ಆಗಸ್ಟ್ 2021, 15:17 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಮೈಸೂರಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರದ ನಿರ್ಜನ ಪ್ರದೇಶದಲ್ಲಿ ಯುವತಿಯೊಬ್ಬರ ಮೇಲೆ ಮಂಗಳವಾರ ರಾತ್ರಿ ನಡೆದ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಜೋಡಿಯ ಮೇಲೆ ಹಲ್ಲೆ ನಡೆಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದು ದುರದೃಷ್ಟಕರ. ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ಜತೆ ಈಗಿನ ಕಷ್ಟದ ಪರಿಸ್ಥಿತಿಯಲ್ಲಿ ನಾನಿದ್ದೇನೆ. ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಒತ್ತಾಯಿಸುತ್ತೇನೆ’ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

‘ಇತ್ತೀಚಿನ ದಿನಗಳಲ್ಲಿ ಮೈಸೂರಿನಲ್ಲಿ ಅನೇಕ ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ. ಲೂಟಿ, ಹಲ್ಲೆ, ಸರ ಅಪಹರಣ ಎಗ್ಗಿಲ್ಲದೇ ನಡೆಯುತ್ತಿವೆ. ಜನರು ತಮ್ಮ ಸುರಕ್ಷತೆ, ಭದ್ರತೆ ವಿಚಾರದಲ್ಲಿ ಆತಂಕಗೊಂಡಿದ್ದಾರೆ. ಆಂತರಿಕ ರಾಜಕೀಯ ಕಲಹದಲ್ಲಿ ಮುಳುಗಿಹೋಗಿರುವ ಬಿಜೆಪಿ ಸರ್ಕಾರವು ನಾಗರಿಕರ ಬಗ್ಗೆ ಕಾಳಜಿ ವಹಿಸಬೇಕು’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.