ಕಲಬುರಗಿ: ‘ತುಂಗಭದ್ರಾ ನದಿಯ ಸುಮಾರು 25 ಟಿಎಂಸಿ ಅಡಿ ನೀರು ಪ್ರತಿ ವರ್ಷ ಆಂಧ್ರಪ್ರದೇಶಕ್ಕೆ ಹರಿದು ಹೋಗುತ್ತಿದೆ. ಹೀಗಾಗಿ ಕೊಪ್ಪಳ ಜಿಲ್ಲೆಯ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಕುರಿತು ಚರ್ಚಿಸಲು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ಸಮಯ ಕೇಳಿದ್ದೇನೆ’ ಎಂದು ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಂತ್ರಿಕ ಸಲಹೆಗಾರರಾಗಿರುವ ನಿವೃತ್ತ ಎಂಜಿನಿಯರ್ ಕನ್ಹಯ್ಯ ನಾಯ್ಡು ಅವರೂ ಜಲಾಶಯ ನಿರ್ಮಾಣದ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ’ ಎಂದರು.
‘ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವುದರ ಜೊತೆಗೆ ಪ್ರಮುಖ ನೀರಾವರಿ ಯೋಜನೆಗಳಿಗೆ ₹ 22 ಸಾವಿರ ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ’ ಎಂದರು.
ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಿಲ್ಲ: ‘ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಕೆಕೆಆರ್‌ಡಿಬಿಯಿಂದ ಅನುದಾನ ನೀಡುವುದರ ಜೊತೆಗೆ ವಿವಿಧ ಇಲಾಖೆಯಿಂದಲೂ ಅನುದಾನ ನೀಡಲಾಗಿದೆ. ಪ್ರಸಕ್ತ ವರ್ಷವೂ ಮಂಡಳಿಗೆ ₹5,000 ಕೋಟಿ ಅನುದಾನ ಘೋಷಿಸಲಾಗಿದೆ. ಹಾಗೆ ನೋಡಿದರೆ ನೀವು (ಕಲ್ಯಾಣ ಕರ್ನಾಟಕ) ಮುಂದೆ ಇದ್ದೀರಿ. ನಿಮಗೆ ಹೆಚ್ಚಿನ ಪಾಲು ಕೊಟ್ಟಿದ್ದನ್ನು ನೋಡಿ ನಮ್ಮವರು (ಕನಕಪುರ) ನನ್ನೊಂದಿಗೆ ಜಗಳ ಶುರು ಮಾಡಿದ್ದಾರೆ. ಹೀಗಾಗಿ, ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದರು.
Cut-off box - null
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.