ADVERTISEMENT

ಒಕ್ಕಲಿಗ ಸ್ವಾಮೀಜಿ ವಿರುದ್ಧ ಕಾಂಗ್ರೆಸ್ ನೀಚ ರಾಜಕಾರಣ: ಬಿ.ವೈ. ವಿಜಯೇಂದ್ರ

ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಕಾಂಗ್ರೆಸ್ ನೀಚ ರಾಜಕಾರಣ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಿಡಿಕಾರಿದ್ದಾರೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ನವೆಂಬರ್ 2024, 2:30 IST
Last Updated 30 ನವೆಂಬರ್ 2024, 2:30 IST
<div class="paragraphs"><p>ಬಿ.ವೈ. ವಿಜಯೇಂದ್ರ</p></div>

ಬಿ.ವೈ. ವಿಜಯೇಂದ್ರ

   

ಬೆಂಗಳೂರು: ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಕಾಂಗ್ರೆಸ್ ನೀಚ ರಾಜಕಾರಣ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಿಡಿಕಾರಿದ್ದಾರೆ.

ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಇತ್ತೀಚೆಗೆ ಮುಸ್ಲಿಂಮರಿಗೆ ಮತದಾನದ ಹಕ್ಕು ಇರಬಾರದು ಎಂದು ಹೇಳಿದ್ದರು. ಅವರ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಖಾಸಗಿ ವ್ಯಕ್ತಿಗಳು ವಿವಿಧ ಕಲಂಗಳ ಅಡಿ ದೂರು ದಾಖಲಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಶ್ರೀಗಳಿಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ.

ADVERTISEMENT

ಇದರ ವಿರುದ್ಧ ತೀವ್ರ ಕಿಡಿಕಾರಿ ಎಕ್ಸ್‌ನಲ್ಲಿ ನಿನ್ನೆ ರಾತ್ರಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ವಾಮೀಜಿ ತಮ್ಮ ಹೇಳಿಕೆಯ ಕುರಿತಂತೆ ಸೌಹಾರ್ದತೆಯನ್ನು ಪುಷ್ಠೀಕರಿಸಿ ಸೂಕ್ತ ಸ್ಪಷ್ಟನೆ ನೀಡಿ ವಿವಾದಕ್ಕೆ ಇತಿಶ್ರೀ ಹಾಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಈ ಪ್ರಕರಣವನ್ನು ಇಷ್ಟಕ್ಕೇ ಕೈ ಬಿಡಬಹುದಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಸ್ವಾಮೀಜಿಗಳ ವಿರುದ್ಧ ದೂರು ದಾಖಲಾಗುವಂತೆ ನೋಡಿಕೊಂಡು ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಯುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ್ರೋಹಿಗಳು, ಸಮಾಜ ಘಾತುಕ ಶಕ್ತಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಒಬ್ಬ ಸಜ್ಜನಿಕೆಯ ಸಂತರೆಂದು ಕರೆಸಿಕೊಂಡಿರುವ ಹಿರಿಯ ಶ್ರೀಗಳ ಬಾಯ್ತಪ್ಪಿದ ಮಾತು ಕ್ರಿಮಿನಲ್ ಅಪರಾಧದಂತೆ ಕಂಡಿರುವುದು ವಿಪರ್ಯಾಸವೆನಿಸುತ್ತದೆ ಎಂದಿದ್ದಾರೆ.

ಶ್ರೀಗಳು ತಾವು ಆಡಿದ ಮಾತುಗಳ ಕುರಿತು ಸೂಕ್ತ ಸ್ಪಷ್ಟನೆ ನೀಡಿ ಮುಸ್ಲಿಂ ಸಮುದಾಯದೊಂದಿಗಿನ ತಮ್ಮ ಬಾಂಧವ್ಯದ ಕುರಿತು ವಿವರಣೆ ನೀಡಿರುವಾಗ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಹಾಗೂ ಹಗರಣಗಳನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ಪ್ರಕರಣಗಳನ್ನೂ ದೊಡ್ಡ ವಿವಾದವನ್ನಾಗಿಸಲು ಹೊರಟು ಜನರ ದಿಕ್ಕು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಲೇ ಇದೆ. ಚಂದ್ರಶೇಖರನಾಥ ಶ್ರೀಗಳಿಗೆ ನೋಟೀಸ್ ನೀಡಿ ವಿಚಾರಣೆಗೆ ಕರೆದಿರುವ ಈ ಕ್ರಮವನ್ನು ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.