ADVERTISEMENT

ಚನ್ನಗಿರಿ| ಜೆಡಿಎಸ್‌ನಲ್ಲಿ ಸಂಘಟನೆ ಇಲ್ಲ, ಕಾಂಗ್ರೆಸ್‌ ಸೇರುವೆ: ಹೊದಿಗೆರೆ ರಮೇಶ್

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 11:25 IST
Last Updated 12 ಆಗಸ್ಟ್ 2021, 11:25 IST
ಹೊದಿಗೆರೆ ರಮೇಶ್‌
ಹೊದಿಗೆರೆ ರಮೇಶ್‌   

ಚನ್ನಗಿರಿ: ‘ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಮೂರು ಬಾರಿ ಸೋಲನ್ನು ಕಂಡಿದ್ದೇನೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆ ಪ್ರಬಲವಾಗಿಲ್ಲದ ಕಾರಣದಿಂದಾಗಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲು ತೀರ್ಮಾನಿಸಲಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ’ ಎಂದು ಜೆಡಿಎಸ್ ಪರಿಶಿಷ್ಟ ಪಂಗಡದ ರಾಜ್ಯ ಘಟಕದ ಅಧ್ಯಕ್ಷ ಹೊದಿಗೆರೆ ರಮೇಶ್ ಘೋಷಿಸಿದರು.

ತಾಲ್ಲೂಕಿನ ಬೆಂಕಿಕೆರೆ ಗ್ರಾಮದ ತೋಟದ ಮನೆಯಲ್ಲಿ ನಡೆದ ಬೆಂಬಲಿಗರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಜೆಡಿಎಸ್ ಬಗ್ಗೆ ಬೇಸರಗೊಂಡು ಕಾಂಗ್ರೆಸ್ ಸೇರ್ಪಡೆಯಾಗುತ್ತಿಲ್ಲ. ಈಗಲೂ ಎಚ್.ಡಿ. ಕುಮಾರಸ್ವಾಮಿ ಹಾಗೂ ದೇವೇಗೌಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಆದರೆ ನನಗೆ ರಾಜಕೀಯ ಶಕ್ತಿ ಬೇಕಾಗಿದ್ದು, ಕಾಂಗ್ರೆಸ್‌ನಲ್ಲಿ ಆ ಶಕ್ತಿ ಇದೆ. ನನ್ನ ನಿಷ್ಠಾವಂತ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಗೆ ಸಂಪೂರ್ಣ ಬೆಂಬಲವನ್ನು ನೀಡಿದ್ದಾರೆ ಎಂದರು.

ADVERTISEMENT

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ಗೆ ಆಹ್ವಾನ ನೀಡಿದ್ದರು. ಈ ಬಗ್ಗೆ ಬೆಂಗಳೂರಿನಲ್ಲಿ ಈ ನಾಯಕರ ಜತೆ ಚರ್ಚೆ ಕೂಡಾ ನಡೆಸಲಾಗಿದೆ. ನಾನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷದ ಕಾರ್ಯಕರ್ತನಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸುತ್ತೇನೆ’ ಎಂದು ಹೇಳಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಜಾಕೀರ್ ಹುಸೇನ್, ಪ್ರಸನ್ನ, ಶಶಿಧರ್, ಪ್ರೊ.ಎ.ಬಿ. ರಾಮಚಂದ್ರಪ್ಪ, ಬಿ. ಮಂಜುನಾಥ್, ಪ್ರಕಾಶ್, ನವೀನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.