ADVERTISEMENT

ಕೋಮು ದ್ವೇಷ ಹರಡಿದ ಆರೋಪ: ಶಾಸಕ ಹರೀಶ್‌ ಪೂಂಜಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 20 ಮೇ 2025, 15:39 IST
Last Updated 20 ಮೇ 2025, 15:39 IST
<div class="paragraphs"><p>ಹರೀಶ್ ಪೂಂಜಾ, ಬೆಳ್ತಂಗಡಿ ಶಾಸಕ</p></div>

ಹರೀಶ್ ಪೂಂಜಾ, ಬೆಳ್ತಂಗಡಿ ಶಾಸಕ

   

ಬೆಂಗಳೂರು: ‘ಕೋಮು ದ್ವೇಷ ಹರಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್‌) ಸಲ್ಲಿಸಲಾಗಿದೆ’ ಎಂದು ರಾಜ್ಯ ಪ್ರಾಸಿಕ್ಯೂಷನ್‌, ಹೈಕೋರ್ಟ್‌ಗೆ ಅರುಹಿದೆ.

ಎಫ್‌ಐಆರ್‌ ರದ್ದು ಕೋರಿ ಹರೀಶ್‌ ಪೂಂಜಾ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ರಜಾಕಾಲದ ನ್ಯಾಯಮೂರ್ತಿ ಎಸ್‌.ರಾಚಯ್ಯ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು,‌‌ ‘ಹರೀಶ್‌ ಪೂಂಜಾ ಹಾಲಿ ಶಾಸಕರು. ಇವರ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದ್ದು ಅದನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆದರೆ, ನಮಗೆ ಯಾವುದೇ ದಾಖಲೆ ನೀಡಿಲ್ಲ. ಹೀಗಾಗಿ, ಶಾಸಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಬೇಕು ಮತ್ತು ದೋಷಾರೋಪ ಪಟ್ಟಿಯ ಪ್ರತಿ ನೀಡಲು ಆದೇಶಿಸಬೇ‌ಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ರಾಜ್ಯ ಪ್ರಾಸಿಕ್ಯೂಷನ್ ಪರ ವಕೀಲರು,‌‌ ‘ತನಿಖಾಧಿಕಾರಿ 16 ದಿನಗಳಲ್ಲಿ ಪ್ರಕರಣದ ತನಿಖೆ ಪೂರ್ಣಗೊಳಿಸಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿರುವ ಕಾರಣ ಎಫ್‌ಐಆರ್‌ ರದ್ದು ಕೋರಿ ಪೂಂಜಾ ಸಲ್ಲಿಸಿರುವ ಈ ಅರ್ಜಿಯನ್ನು ತಿದ್ದುಪಡಿ ಮಾಡಬೇಕಾಗುತ್ತದೆ. ಇಲ್ಲವೇ ಹೊಸ ಅರ್ಜಿ ಸಲ್ಲಿಸಬೇಕು’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ತಿದ್ದುಪಡಿ ಅರ್ಜಿ ಸಲ್ಲಿಸಿ’ ಎಂದು ಪೂಂಜಾ ಪರ ವಕೀಲರಿಗೆ‌ ಸೂಚಿಸಿ ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿತು.

ಪ್ರಕರಣವೇನು?: ‘ಇದೇ 3ರಂದು ತೆಕ್ಕಾರುವಿನ ಭಟ್ರಬೈಲಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡಿದ್ದ ಹರೀಶ್‌ ಪೂಂಜಾ ಅವರು ತುಳು ಭಾಷೆಯಲ್ಲಿ ಮಾತನಾಡುತ್ತಾ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷ ಹರಡಿದ್ದಾರೆ. ಈ ಸಂಬಂಧದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲೂ ವೀಕ್ಷಿಸಲಾಗಿದೆ’ ಎಂದು ಆರೋಪಿಸಿ ತೆಕ್ಕಾರಿನ ಎಸ್‌.ಬಿ.ಇಬ್ರಾಹಿಂ, ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಮೇ 4ರಂದು ದೂರು ನೀಡಿದ್ದರು.

ದೂರನ್ನು ಆಧರಿಸಿ ಹರೀಶ್‌ ಪೂಂಜಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 196 (ಧರ್ಮದ ಆಧಾರದಲ್ಲಿ ದ್ವೇಷ ಹರಡುವುದು), 353(2) (ದ್ವೇಷ ಹರಡಲು ಸುಳ್ಳು ಸುದ್ದಿ ಹಂಚಿಕೆ) ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.