ADVERTISEMENT

ಮುರುಘಾ ಶರಣರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ | ಮುಕ್ತ ತನಿಖೆಗೆ ಅವಕಾಶ: ಸಿಎಂ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 5:50 IST
Last Updated 2 ಸೆಪ್ಟೆಂಬರ್ 2022, 5:50 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಮಂಗಳೂರು: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಲಾಗಿದ್ದು, ತನಿಖೆ ಮುಕ್ತವಾಗಿ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮರುಘಾ ಶರಣರ ಬಂಧನ ವಿಳಂಬವಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ ಎಂದು ಮಾಧ್ಯಮದವರು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, 'ಈ ಮಾತುಗಳಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಕಾನೂನು ಪ್ರಕಾರವೇ ಎಲ್ಲವೂ ನಡೆಯುತ್ತದೆ. ಹೀಗಾಗಿ ಈ (ತನಿಖೆ ಪ್ರಗತಿಯಲ್ಲಿರುವ) ಸಂದರ್ಭದಲ್ಲಿ ಮಾತನಾಡುವುದೂ ಸರಿಯಲ್ಲ. ತನಿಖಾಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದೇವೆ. ಆ ಕೆಲಸವನ್ನು ಅವರು ಮಾಡುತ್ತಿದ್ದಾರೆ' ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಮಾತನಾಡಿದ ಬೊಮ್ಮಾಯಿ, ಬಹಳ ದಿನಗಳ ಬಳಿಕ ಪ್ರಧಾನಿ ಅವರು ರಾಜ್ಯದ ಕರಾವಳಿ ಪ್ರದೇಶಕ್ಕೆ ಬರುತ್ತಿದ್ದಾರೆ. ₹ 3800 ಕೋಟಿ ಮೊತ್ತದ ಹಲವು ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಬಿಜೆಪಿಯ 'ಜನೋತ್ಸವ' ಕಾರ್ಯಕ್ರಮವು ದೊಡ್ಡಬಳ್ಳಾಪುರದಲ್ಲಿ ನಡೆಯಲಿದ್ದು ಸೆ.8ರಂದು ದಿನಾಂಕ ನಿಗದಿಯಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ.ನಡ್ಡಾ ಅವರು ಪಾಲ್ಗೊಳ್ಳಲಿದ್ದಾರೆ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.