ADVERTISEMENT

ಶೀಘ್ರವೇ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆ: ಬಸವರಾಜ ಬೊಮ್ಮಾಯಿ

ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 19:45 IST
Last Updated 15 ಆಗಸ್ಟ್ 2022, 19:45 IST
   

ಬೆಂಗಳೂರು: ‘ಸೆಪ್ಟೆಂಬರ್‌ ತಿಂಗಳಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು ಉದ್ಘಾಟಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ವತಿಯಿಂದ ಸೋಮವಾರ ಇಲ್ಲಿ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣನ 225ನೇ ಜಯಂತಿ ಹಾಗೂ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

‘ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ಬೇಕಾಗಿರುವ ₹50 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ’ ಎಂದರು.

ADVERTISEMENT

ದಿನೇಶ್ ಗುಂಡೂರಾವ್, ‘ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ರಾಯಣ್ಣನ ಹೆಸರಿನಲ್ಲಿ ಪ್ರಾಧಿಕಾರ ರಚಿಸಲಾಗಿದೆ. ನಂದಗಡದಲ್ಲಿ ಅಥವಾ ಸಂಗೊಳ್ಳಿಯಲ್ಲಿ ಅವರ ಸ್ಮಾರಕ ನಿರ್ಮಾಣ ಮತ್ತು ಸೈನಿಕ ಶಾಲೆಯನ್ನು ಸ್ಥಾಪಿಸುವುದಕ್ಕೆ ₹250 ಕೋಟಿ ಅನುದಾನ ನೀಡಲಾಗಿತ್ತು. ಈ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ನೀಡಿ, ಕಾಮಗಾರಿಗಳನ್ನು ಬೇಗ ಮುಕ್ತಾಯಗೊಳಿಸಬೇಕು’ ಎಂದು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು.

ಮಾಜಿ ಸಚಿವ ಎಚ್.ಎಂ. ರೇವಣ್ಣ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಾಟಾಳ್ ನಾಗರಾಜ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಗೊಳ್ಳಿ ಕೃಷ್ಣಮೂರ್ತಿ ಇದ್ದರು.

**

ದೆಹಲಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸುವ ಕುರಿತು ಈಗಾಗಲೇ ಪತ್ರ ಬರೆಯಲಾಗಿದೆ. ದೆಹಲಿಗೆ ಹೋಗಿ ಈ ಕುರಿತು ಮಾತನಾಡಲಾಗುವುದು.
–ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.