ಸಿದ್ದರಾಮಯ್ಯ
ಬೆಂಗಳೂರು: ಹೈಕಮಾಂಡ್ ಹಲವು ಬಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರೂ ಮುಖ್ಯಮಂತ್ರಿ ಬದಲಾವಣೆ ವಿಚಾರದ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಮುಂದುವರಿದಿದೆ.
ಸುದ್ದಿಗಾರರ ಪ್ರಶ್ನೆಗೆ ಗುರುವಾರ ಉತ್ತರಿಸಿದ ಗೃಹ ಸಚಿವ ಜಿ. ಪರಮೇಶ್ವರ, ‘ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಶಾಸಕರ ಅಭಿಪ್ರಾಯ ಮುಖ್ಯ. ಅಭಿಪ್ರಾಯ ಸಂಗ್ರಹಿಸಿದ ನಂತರ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ’ ಎಂದರು.
‘ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲು ಶಾಸಕರ ಬೆಂಬಲ ಇರಬೇಕು ಎಂದೇನೂ ಇಲ್ಲ. ಹೈಕಮಾಂಡ್ ಹೇಳಿದರೆ ಸಾಕು’ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಸಚಿವರೇ ಆಗಲಿ, ಶಾಸಕರೇ ಆಗಲಿ ಯಾವುದೇ ವಿಚಾರವನ್ನು ಸರ್ಕಾರ ಹಾಗೂ ಪಕ್ಷದ ವೇದಿಕೆಗಳಲ್ಲೇ ಚರ್ಚಿಸಬೇಕು. ಹಾದಿಬೀದಿಯಲ್ಲಿ ಹೇಳಿಕೆ ನೀಡವುದು ತಪ್ಪು’ ಎಂದು ಹೇಳಿದರು.
ಮಂಗಳವಾರ ಮಾತನಾಡಿದ್ದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ‘ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಶಾಸಕಾಂಗ ಪಕ್ಷದ ಅಭಿಪ್ರಾಯ ಸಂಗ್ರಹಿಸಿದ ನಂತರವೇ ಹೈಕಮಾಂಡ್ ನಿರ್ಣಯಗಳನ್ನು ತೆಗೆದುಕೊಳ್ಳುತ್ತದೆ. ಎಲ್ಲ ಶಾಸಕರದ್ದು ಒಂದೇ ಅಭಿಪ್ರಾಯ ಇರುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹತೆ ಇರುವವರು ಒಬ್ಬರಲ್ಲ, ಬಹಳ ಜನ ಇದ್ದಾರೆ. ಹೈಕಮಾಂಡ್ ಎಲ್ಲರ ಅಭಿಪ್ರಾಯ ಕೇಳುತ್ತದೆ. ಅವರು ಏನು ನಿರ್ಣಯ ತೆಗೆದುಕೊಳ್ಳುತ್ತಾರೊ ಅದಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ’ ಎಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.