ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಜಾವಾಣಿ ಚಿತ್ರ
ಬೆಂಗಳೂರು: ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡಕ್ಕೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆತುರದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದರೆ ಬಂದೋಬಸ್ತ್ ಕರ್ತವ್ಯಕ್ಕೆ ತೊಂದರೆ ಆಗಬಹುದು ಎಂದು ವಿಧಾನಸೌಧದ ಭದ್ರತಾ ವಿಭಾಗದ ಡಿಸಿಪಿ ವರದಿ ನೀಡಿದ್ದನ್ನು ತಮ್ಮ ಗಮನಕ್ಕೆ ಏಕೆ ತಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಅವರು ಪೂರ್ವನಿಗದಿತ ಕಾರ್ಯಕ್ರಮದಲ್ಲಿ ಭಾಗಿಯಾಗಲು ಭಾನುವಾರ ಮಧ್ಯಾಹ್ನ ಮೈಸೂರಿಗೆ ತೆರಳಬೇಕಿತ್ತು. ಆದರೆ, ಮಧ್ಯಾಹ್ನ ಅವರ ಕಾವೇರಿ ನಿವಾಸಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ.ಪರಮೇಶ್ವರ ಬಂದರು. ಈ ವೇಳೆ ತಮ್ಮ ಪ್ರವಾಸವನ್ನು ಕೆಲಕಾಲ ಮುಂದೂಡಿದ ಅವರು, ಏಳೆಂಟು ನಿಮಿಷ ಚರ್ಚೆ ನಡೆಸಿದರು ಎಂದು ಮೂಲಗಳು ಮಾಹಿತಿ ನೀಡಿವೆ.
‘ಡಿಸಿಪಿಯಿಂದ ನಿಮಗೆ ಪತ್ರ ಬಂದಿದ್ದರೂ ಅದನ್ನು ನನ್ನ ಗಮನಕ್ಕೆ ಏಕೆ ತಂದಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಜಿ.ಸತ್ಯವತಿ ಅವರನ್ನು ಮುಖ್ಯಮಂತ್ರಿ ಪ್ರಶ್ನಿಸಿದರು’ ಎಂದು ಮೂಲಗಳು ತಿಳಿಸಿವೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೊಣೆ ನಿಭಾಯಿಸುತ್ತಿರುವ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ರಜೆಯ ಮೇಲೆ ಕಳುಹಿಸುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.