ಬೆಂಗಳೂರು: ‘ಮಕ್ಕಳಲ್ಲಿ ಕ್ಯಾನ್ಸರ್ ಪ್ರಕರಣಗಳೂ ಹೆಚ್ಚಳವಾಗುತ್ತಿದ್ದು, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನೋಂದಣಿ ಪ್ರಕಾರ ಕಳೆದ ವರ್ಷ 601 ಮಕ್ಕಳಲ್ಲಿ ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ. ಇವು ಒಟ್ಟು ಕ್ಯಾನ್ಸರ್ ಪ್ರಕರಣಗಳ ಶೇ 4.6 ರಷ್ಟಾಗಿವೆ’ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ನಿರ್ದೇಶಕ ಡಾ.ಟಿ.ನವೀನ್ ಹೇಳಿದರು.
‘ಬಾಲ್ಯ ಕ್ಯಾನ್ಸರ್ ಜಾಗೃತಿ ಮಾಸಾಚರಣೆ’ ಪ್ರಯುಕ್ತ ಸಂಸ್ಥೆಯು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಯಾವುದೇ ಶಂಕಿತ ಕ್ಯಾನ್ಸರ್ ಗೆಡ್ಡೆ ಹಾಗೂ ರೋಗ ಲಕ್ಷಣಗಳಿದ್ದರೆ ಮಕ್ಕಳನ್ನು ತಪಾಸಣೆಗೆ ಒಳಪಡಿಸಬೇಕು. ಆರಂಭಿಕ ಹಂತದಲ್ಲಿಯೇ ರೋಗ ಪತ್ತೆ ಮಾಡಿದರೆ ಬೇಗ ಗುಣಪಡಿಸಲು ಸಾಧ್ಯ. ತಡವಾಗಿ ತಪಾಸಣೆಗೆ ಒಳಪಡಿಸಿ, ಚಿಕಿತ್ಸೆ ನೀಡಿದಲ್ಲಿ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳಲಿದೆ’ ಎಂದರು.
‘ಕರ್ನಾಟಕ ಮಾತ್ರವಲ್ಲದೆ, ತಮಿಳುನಾಡು, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳಿಂದ ಇಲ್ಲಿಗೆ ಚಿಕಿತ್ಸೆಗೆ ಜನರು ಬರುತ್ತಿದ್ದಾರೆ. ಸಂಸ್ಥೆಯಲ್ಲಿ 16 ಬೆಡ್‌ಗಳ ಮಕ್ಕಳ ತೀವ್ರನಿಗಾ ಘಟಕವಿದೆ. 75 ಬೆಡ್‌ಗಳ ಕಪೂರ್ ವಾರ್ಡ್ ಮಕ್ಕಳ ಚಿಕಿತ್ಸೆಗೆ ಸಹಕಾರಿಯಾಗಿದೆ. ಸಂಸ್ಥೆಯಲ್ಲಿ ‘ಅಟೋಲೋಗಸ್’ ಮತ್ತು ‘ಅಲೋಜೆನಿಕ್’ ಕಸಿಯನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.
ಸಂಸ್ಥೆಯ ಮಕ್ಕಳ ಗಂಥಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅರುಣ್ ಕುಮಾರ್, ‘ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಮಾಡುವುದು, ತಡೆಗಟ್ಟುವಿಕೆ ಮತ್ತು ಚಿಕಿತ್ಸೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಿದೆ. ಕ್ಯಾನ್ಸರ್ ಪತ್ತೆಯಾದ ಬಳಿಕ ವಿಶೇಷ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗುವುದು ಮುಖ್ಯ’ ಎಂದರು.
‘ಚಿಕಿತ್ಸೆಗೆ ಒಳಗಾದ ಮೇಲೆ ವಯಸ್ಕರಿಗಿಂತಲೂ ಮಕ್ಕಳು ಬಹಳ ಬೇಗ ಚೇತರಿಸಿಕೊಳ್ಳುತ್ತಾರೆ. ವಯಸ್ಕರಿಗೆ ಹಾಗೂ ಚಿಕ್ಕ ಮಕ್ಕಳಿಗೆ ಬೇರೆ ಬೇರೆ ಚಿಕಿತ್ಸೆ ಅಗತ್ಯವಿದ್ದು, ಕ್ಯಾನ್ಸರ್ ಬಗೆಗೆ ಸಮಾಜದಲ್ಲಿರುವ ಮೂಢನಂಬಿಕೆಗಳನ್ನು ಹೋಗಲಾಡಿಸಬೇಕು’ ಎಂದು ಅಭಿಪ್ರಾಯಪಟ್ಟರು.
ಸಂಸ್ಥೆಯ ಆಡಳಿತಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.