ADVERTISEMENT

ಚಿಲುಮೆ ಪ್ರಕರಣ: ‘ಶ್ರೀನಿವಾಸ್‌ ಹುದ್ದೆಗೆ ಅನ್ಯ ನೇಮಕ ಸಲ್ಲ’

ಹೈಕೋರ್ಟ್‌ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 21:11 IST
Last Updated 7 ಡಿಸೆಂಬರ್ 2022, 21:11 IST
high court
high court   

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಮತದಾರರ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂಬ ಆರೋಪ
ದಡಿ ಅಮಾನತುಗೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಕೆ.ಶ್ರೀನಿವಾಸ್‌ ಅವರ ಹುದ್ದೆಗೆ ಬೇರೊಬ್ಬರನ್ನು ನೇಮಿಸುವಂತಿಲ್ಲ ಎಂಬ ಆದೇಶ ಮುಂದುವರಿಯಲಿದೆ’ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಈ ಸಂಬಂಧ ಕೆ.ಶ್ರೀನಿವಾಸ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ಮತ್ತು ಪಿ.ಎನ್‌. ದೇಸಾಯಿ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ, ‘ಅಮಾನತು ಆದೇಶಕ್ಕೆ ತಡೆ ನೀಡಬೇಕು’ ಎಂಬ ಅರ್ಜಿದಾರರ ಕೋರಿಕೆಯನ್ನು ಪುರಸ್ಕರಿಸಲು ನಿರಾಕರಿಸಿತು.

ವಿಚಾರಣೆ ವೇಳೆ ಕೆ. ಶ್ರೀನಿವಾಸ್ ಪರ ಹಾಜರಿದ್ದ ಹಿರಿಯ ವಕೀಲ ಪಿ. ಎಸ್‌. ರಾಜಗೋಪಾಲ್, ‘ಅರ್ಜಿದಾರರುಪ್ರಕರಣದಲ್ಲಿ ಯಾವುದೇ ರೀತಿಯಲ್ಲೂ ಭಾಗಿಯಾಗಿಲ್ಲ. ಆದರೂ, ಕೇಂದ್ರ ಚುನಾವಣಾ ಆಯೋಗವು ಅಮಾನತಿಗೆ ಶಿಫಾರಸು ಮಾಡಿದೆ‘ ಎಂದು ಬಲವಾಗಿ ಆಕ್ಷೇಪಿಸಿದರು.

ADVERTISEMENT

ಕೇಂದ್ರ ಚುನಾವಣಾ ಆಯೋಗದ ಪರ ಹಾಜರಿದ್ದ ಹಿರಿಯ ವಕೀಲ ಕೆ.ಎನ್‌. ಫಣೀಂದ್ರ, ‘ಲಭ್ಯ ದಾಖಲೆಗಳು ಹಗರಣವನ್ನು ಪುಷ್ಟೀಕರಿಸುವಂತಿದ್ದ ಕಾರಣ ಶ್ರೀನಿವಾಸ್‌ ಅವರನ್ನುಅಮಾನತು ಮಾಡಲು ಆದೇಶಿಸಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಈ ಸಂದರ್ಭದಲ್ಲಿ ಅಮಾನತು ಆದೇಶಕ್ಕೆ ತಡೆ ನೀಡಬಾರದು’ ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಚುನಾವಣಾ ಪ್ರಕ್ರಿಯೆ ಮುಂದುವರಿಸುವ ನಿಟ್ಟಿನಲ್ಲಿ, ಆಯೋಗವು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಹುದ್ದೆಗೆ ಇಬ್ಬರು ವಿಶೇಷ ಅಧಿಕಾರಿಗಳನ್ನು
ನೇಮಕ ಮಾಡಬಹುದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ತನಿಖಾಧಿಕಾರಿ ಗುರುವಾರ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಗುರುವಾರ (ಡಿ.8) ಮಧ್ಯಾಹ್ನ ಚೇಂಬರ್‌ನಲ್ಲೇ ವಿಚಾರಣೆ ನಡೆಸಲಾಗುವುದು‘ ಎಂದು ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.