ಬಸ್ ಅಪಘಾತ ಹಾಗೂ ಒಳಚಿತ್ರದಲ್ಲಿ ಸಿಎಂ ಸಿದ್ಧರಾಮಯ್ಯ
–ಪ್ರಜಾವಾಣಿ ಚಿತ್ರಗಳು
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು, ಮೃತಪಟ್ಟವರ ಕುಟುಂಬಗಳಿಗೆ ತಲಾ ₹ 5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬರೆದುಕೊಂಡಿದ್ದಾರೆ.
‘ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ’ ಎಂದು ಅವರು ದುಃಖಿತರಾಗಿದ್ದಾರೆ.
’ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ’ ಎಂದು ಹೇಳಿದ್ದಾರೆ.
ಘಟನೆಯಿಂದ ತೀವ್ರ ಆಘಾತವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
‘ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ’ ಎಂದು ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.