ಅಪಘಾತದ ದೃಶ್ಯ (ಒಳ ಚಿತ್ರದಲ್ಲಿ ಪ್ರಧಾನಿ ಮೋದಿ)
– ಪ್ರಜಾವಾಣಿ ಚಿತ್ರಗಳು
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ₹ 2 ಲಕ್ಷ ನೀಡುವುದಾಗಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಬಗ್ಗೆ ಪ್ರಧಾನ ಮಂತ್ರಿ ಕಾರ್ಯಾಲಯದ ‘ಎಕ್ಸ್’ ಪೋಸ್ಟ್ ಮಾಹಿತಿ ನೀಡಲಾಗಿದೆ.
ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಮೋದಿ ಹಾರೈಸಿದ್ದಾರೆ.
ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ₹ 2 ಲಕ್ಷ ಹಾಗೂ ಗಾಯಗೊಂಡವರ ಕುಟುಂಬಕ್ಕೆ ₹ 50 ಸಾವಿರ ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ.
ಬಸ್ ಅಪಘಾತದಿಂದ ಅತೀವ ನೋವಾಗಿದೆ. ಮೃತಪಟ್ಟವರ ಕುಟುಂಬಕ್ಕೆ ಸಂತಾಪಗಳು. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ‘ಎಕ್ಸ್’ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಂಟೈನರ್ ಹಾಗೂ ಸ್ಲೀಪರ್ ಬಸ್ ನಡುವೆ ಗುರುವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಹಲವು ಮಂದಿ ಸಾವಿಗೀಡಾಗಿದ್ದಾರೆ. ಸಾವಿನ ಸಂಖ್ಯೆ ಇನ್ನೂ ನಿಖರವಾಗಿಲ್ಲ.
ಸೀಬರ್ಡ್ ಕಂಪನಿಯ ಬಸ್ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿತ್ತು. ಬೆಂಗಳೂರು ಕಡೆಗೆ ಹೊರಟಿದ್ದ ಕಂಟೈನರ್ ಡಿವೈಡರ್ ಗೆ ಡಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.