ADVERTISEMENT

ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು CIDಗೆ ಅನುಮತಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 0:55 IST
Last Updated 16 ಏಪ್ರಿಲ್ 2025, 0:55 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ   

ಬೆಂಗಳೂರು: ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಅದರ ಬಡ್ಡಿ ಸೇರಿದಂತೆ ಒಟ್ಟು ₹439 ಕೋಟಿ ಪಾವತಿ ಮಾಡದೆ ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹಾಗೂ ಇನ್ನಿಬ್ಬರ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲು ಸಿಐಡಿಗೆ ಹೈಕೋರ್ಟ್‌ ಅನುಮತಿ ನೀಡಿದೆ.

ಈ ಸಂಬಂಧ, ‘ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌’ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ ಜಾರಕಿಹೊಳಿ, ನಿರ್ದೇಶಕರಾಗಿದ್ದ ವಸಂತ ಪಾಟೀಲ ಮತ್ತು ಶಂಕರ್‌ ಪವಾಡೆ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೆರೂರು ಮಂಗಳವಾರ ವಿಚಾರಣೆ ನಡೆಸಿದರು.

‘ಸಿಐಡಿಯು ಸಕ್ಷಮ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬಹುದು. ಆದರೆ, ಹೈಕೋರ್ಟ್‌ ಮುಂದಿನ ಆದೇಶ ಮಾಡುವತನಕ ದೋಷಾರೋಪ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆತುರದ ಕ್ರಮ ಕೈಗೊಳ್ಳಬಾರದು’ ಎಂದು ನ್ಯಾಯಪೀಠ ವಿಶೇಷ ನ್ಯಾಯಾಲಯಕ್ಕೆ  ನಿರ್ದೇಶಿಸಿದೆ. 

ADVERTISEMENT

ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ರವಿ ಬಿ.ನಾಯಕ್ ಹಾಗೂ ಸಿಐಡಿ ಪರ ಹೆಚ್ಚುವರಿ ರಾಜ್ಯ ಪ್ರಾಸಿಕ್ಯೂಟರ್‌ ಬಿ.ಎನ್‌.ಜಗದೀಶ್‌ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.