ADVERTISEMENT

ಕೋವಿಡ್‌ ಹೆಚ್ಚಿದ್ದರೆ ತರಗತಿ ಬಂದ್: ಬಸವರಾಜ ಬೊಮ್ಮಾಯಿ

ಸೋಂಕು ಶೇ 2ಕ್ಕಿಂತ ಕಡಿಮೆ ಇದ್ದರಷ್ಟೇ ಶಾಲೆ–ಕಾಲೇಜು

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2021, 20:24 IST
Last Updated 14 ಆಗಸ್ಟ್ 2021, 20:24 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಒಂಬತ್ತನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಇದೇ 23ರಿಂದ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್‌ ದೃಢಪ್ರಮಾಣ ದರ ಶೇ 2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭಿಸದೇ ಇರಲು ಸರ್ಕಾರ ನಿರ್ಣಯಿಸಿದೆ.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬೊಮ್ಮಾಯಿ, ‘ಒಂಬತ್ತನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಇದೇ 23ರಿಂದ ಭೌತಿಕ ತರಗತಿ ಆರಂಭಿಸುವ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ತರಗತಿ ಆರಂಭದಲ್ಲಿ ಶೇ 2ಕ್ಕಿಂತ ಹೆಚ್ಚಿನ ಮಕ್ಕಳಲ್ಲಿ ಸೋಂಕು ಪತ್ತೆಯಾದರೆ ಒಂದು ವಾರದವರೆಗೆ ಅಂತಹ ಶಾಲೆ–ಕಾಲೇಜುಗಳನ್ನು ಬಂದ್‌ ಮಾಡಿ, ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಲಾಗುವುದು’ ಎಂದರು.

ADVERTISEMENT

ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೋವಿಡ್‌ ಲಸಿಕೆ ಹಾಕಿಸಿಕೊಂಡಿರುವುದು ಕಡ್ಡಾಯ. ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಪೋಷಕರೂ ಲಸಿಕೆ ಪಡೆದಿರಬೇಕು. ಗಡಿ ಜಿಲ್ಲೆಗಳಲ್ಲಿ ಗಡಿ ಭಾಗದ ತಾಲ್ಲೂಕುಗಳಲ್ಲಿನ ಕೋವಿಡ್‌ ದೃಢಪ್ರಮಾಣ ದರ ಶೇ 2ಕ್ಕಿಂತ ಹೆಚ್ಚು ಇದ್ದಲ್ಲಿ ತಾಲ್ಲೂಕಿಗೆ ಸೀಮಿತವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಡಾ.ದೇವಿಪ್ರಸಾದ್‌ ಶೆಟ್ಟಿ, ಡಾ.ಸುದರ್ಶನ್‌ ಸೇರಿದಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಹಾಗೂ ಕೋವಿಡ್‌ ನಿಯಂತ್ರಣ ಕಾರ್ಯಪಡೆಯಲ್ಲಿರುವ ತಜ್ಞರು ಉತ್ತಮವಾದ ಸಲಹೆಗಳನ್ನು ನೀಡಿದ್ದಾರೆ. ಅವರ ವರದಿಗಳು ಮತ್ತು ಅಭಿಪ್ರಾಯಗಳ ಕುರಿತು ಕೂಲಂಕಷವಾಗಿ ಚರ್ಚಿಸಿ ತೀರ್ಮಾನಕ್ಕೆ ಬರಲಾಗಿದೆ. ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆ ಇನ್ನೂ ಕೊನೆಯ ಹಂತದಲ್ಲಿ ಇದೆ ಎಂಬ ಅಭಿಪ್ರಾಯವನ್ನು ತಜ್ಞರು ನೀಡಿದ್ದಾರೆ ಎಂದರು.

ಗಡಿಯಲ್ಲಿ ಸಂಪೂರ್ಣ ಪರೀಕ್ಷೆ: ಕೇರಳ ಮತ್ತು ಮಹಾರಾಷ್ಟ್ರ ಗಡಿಭಾಗದಿಂದ 10 ಕಿ.ಮೀ. ದೂರದವರೆಗಿನ ಪ್ರದೇಶಗಳಲ್ಲಿ ಎಲ್ಲರಿಗೂ ಕೋವಿಡ್‌ ಪರೀಕ್ಷೆ ನಡೆಸಲಾಗುವುದು. ಅಲ್ಲಿನ ಎಲ್ಲ ಜನರಿಗೂ ಕೋವಿಡ್‌ ಲಸಿಕೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಬೀದರ್‌, ಹಾವೇರಿ, ವಿಜಯಪುರ, ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೋವಿಡ್‌ ಪರೀಕ್ಷೆಯ ಪ್ರಮಾಣ ಹೆಚ್ಚಿಸಲಾಗುವುದು. ಕೋವಿಡ್‌ ದೃಢಪ್ರಮಾಣ ದರ ಹೆಚ್ಚಾಗಿರುವ ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಸಿಕೆ ನೀಡುವ ಪ್ರಮಾಣ ಹೆಚ್ಚಿಸಲಾಗುವುದು ಎಂದು ವಿವರ ನೀಡಿದರು.

ಜಿಲ್ಲಾವಾರು ಯೋಜನೆ: ಕೋವಿಡ್‌ ಪರಿಸ್ಥಿತಿ ಜಿಲ್ಲೆಯಿಂದ ಜಿಲ್ಲೆಗೆ ವಿಭಿನ್ನವಾಗಿದೆ. ಈ ಕಾರಣದಿಂದ ಜಿಲ್ಲಾವಾರು ಕೋವಿಡ್‌ ನಿರ್ವಹಣಾ ಯೋಜನೆಗಳನ್ನು ರೂಪಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.

‘ರಾಜ್ಯದಲ್ಲಿ ಈವರೆಗೆ 4 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ. ಸದ್ಯ 14.89 ಲಕ್ಷ ಡೋಸ್‌ ಲಸಿಕೆ ದಾಸ್ತಾನು ಇದೆ. ಮುಂದಿನ ವಾರ ಆರೋಗ್ಯ ಸಚಿವ ಸುಧಾಕರ್‌ ಜತೆ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಮಾಡಲಾಗುವುದು. ಲಸಿಕೆ ಪೂರೈಕೆಯ ಪ್ರಮಾಣವನ್ನು 65 ಲಕ್ಷ ಡೋಸ್‌ನಿಂದ ಒಂದು ಕೋಟಿ ಡೋಸ್‌ ಗೆ ಹೆಚ್ಚಿಸುವಂತೆ ಮನವಿ ಮಾಡಲಾಗುವುದು’ ಎಂದು ಬೊಮ್ಮಾಯಿ ತಿಳಿಸಿದರು.

ಸಚಿವರಾದ ಡಾ.ಸಿ.ಎನ್‌. ಅಶ್ವತ್ಥರಾನಾಯಣ, ಡಾ.ಕೆ. ಸುಧಾಕರ್‌, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್, ಡಾ.ದೇವಿಪ್ರಸಾದ್‌ ಶೆಟ್ಟಿ, ಡಾ. ಸುದರ್ಶನ್‌ ಸೇರಿದಂತೆ ಸಲಹಾ ಸಮಿತಿ ಹಾಗೂ ತಜ್ಞರ ಸಮಿತಿಯ ಸದಸ್ಯರು ಸಭೆಯಲ್ಲಿದ್ದರು.

ಆರು ಜಿಲ್ಲೆಗಳಲ್ಲಿ ಪ್ರಯೋಗಾಲಯ:

‘ಡೆಲ್ಟಾ ಮತ್ತು ಡೆಲ್ಟಾ ಪ್ಲಸ್‌ ರೂಪಾಂತರಿ ಕೊರೊನಾ ವೈರಾಣುಗಳ ಕುರಿತು ಅಧ್ಯಯನ ನಡೆಸಲು ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರ್ಗಿ, ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಮೂರು ವಾರದೊಳಗೆ ಜೆನೋಮ್‌ ಸೀಕ್ವೆನ್ಸಿಂಗ್‌ ಪರೀಕ್ಷಾ ಪ್ರಯೋಗಾಲಯ ಆರಂಭಿಸಲಾಗುವುದು. ಸೋಮವಾರವೇ ಈ ಸಂಬಂಧ ಆದೇಶ ಹೊರಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ಬಿಬಿಎಂಪಿ ಆಯುಕ್ತರಿಗೆ ಅಧಿಕಾರ:

‘ಬೆಂಗಳೂರಿನಲ್ಲಿ ಸದ್ಯ ಕೋವಿಡ್‌ ದೃಢಪ್ರಮಾಣ ದರ ಶೇ 0.75ರಷ್ಟಿದೆ. ಅದು ಶೇ 2 ತಲುಪಿದರೆ ಹಾಗೂ ಆಮ್ಲಜನಕ ಪೂರೈಕೆಯ ಹಾಸಿಗೆಗಳು ಶೇ 40ರಷ್ಟು ಭರ್ತಿಯಾದರೆ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಅಧಿಕಾರವನ್ನು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನೀಡಲಾಗಿದೆ’ ಎಂದು ಬೊಮ್ಮಾಯಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.