ADVERTISEMENT

ಪದವಿ, ಎಂಜಿನಿಯರಿಂಗ್‌, ಡಿಪ್ಲೊಮಾಗೆ 15ರಿಂದ ಆಫ್‌ಲೈನ್‌ ತರಗತಿ

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 17:01 IST
Last Updated 11 ಜನವರಿ 2021, 17:01 IST
ಡಾ.ಸಿ.ಎನ್‌. ಅಶ್ವತ್ಥನಾರಾಯಣ
ಡಾ.ಸಿ.ಎನ್‌. ಅಶ್ವತ್ಥನಾರಾಯಣ   

ಬೆಂಗಳೂರು: ‘ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮಾ ಕೋರ್ಸ್‌ಗಳಿಗೆ ಇದೇ 15ರಿಂದ ಆಫ್‌ಲೈನ್‌ ತರಗತಿ ಆರಂಭಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಈ ಸಂಬಂಧ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಅಂತಿಮ ವರ್ಷದ ಆಫ್‌ಲೈನ್‌ ತರಗತಿಗಳು ಈಗಾಗಲೇ ಆರಂಭವಾಗಿ ಯಶಸ್ವಿಯಾಗಿ ನಡೆಯುತ್ತಿವೆ. ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳು ಕೂಡ ತಮಗೂ ನೇರ ತರಗತಿಗಳನ್ನು ಆರಂಭಿಸುವಂತೆ ಒತ್ತಾಯ ಮಾಡುತ್ತಿದ್ದರು’ ಎಂದರು.

‘ಎನ್‌ಸಿಸಿ ಮತ್ತು ‌ಎನ್‌ಎಸ್‌ಎಸ್‌ ತರಬೇತಿಗೂ ಅವಕಾಶ ನೀಡಲಾಗಿದೆ. ಎನ್‌ಸಿಸಿ ಕೂಡ ಪರೀಕ್ಷೆ ಗಳನ್ನು ಆಯೋಜಿಸಬೇಕಾಗಿದ್ದು ಅದಕ್ಕಾಗಿ ಅಲ್ಪಾವಧಿ ಶಿಬಿರಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಬಿ- ಸರ್ಟಿಫಿಕೇಟ್ ಪರೀಕ್ಷೆಗೆ ಮೂರು ದಿನಗಳ ಹಾಗೂ ಸಿ- ಸರ್ಟಿಫಿಕೇಟ್ ಪರೀಕ್ಷೆಗೆ ಐದು ದಿನಗಳ ಶಿಬಿರ ‌ನಡೆಸಲು ಅವಕಾಶ ನೀಡಲಾಗಿದೆ’ ಎಂದರು.

ADVERTISEMENT

‘ತರಗತಿಗಳು ಆರಂಭವಾಗುತ್ತಿರುವ ಕಾರಣ ಪೂರ್ಣ ಪ್ರಮಾಣದಲ್ಲಿ ಹಾಸ್ಟೆಲ್‌ಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಅದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿ (ಎಸ್‌ಒಪಿ) ಸಿದ್ಧಪಡಿಸುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳನ್ನು ಕೋರಲಾಗಿದೆ. ಕಾಲೇಜುಗಳಲ್ಲಿ ಗ್ರಂಥಾಲಯ, ಕ್ಯಾಂಟೀನ್‌, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆ, ಕ್ರೀಡಾಕೂಟ ಆಯೋಜನೆಗೂ ಎಸ್‌ಒಪಿ ಸಿದ್ಧಪಡಿಸಲಾಗಿದೆ’ ಎಂದರು.

ಪರೀಕ್ಷೆ ವೇಳಾಪಟ್ಟಿ ಶೀಘ್ರ: ‘ಏಕಕಾಲಕ್ಕೆ ಆಫ್‌ಲೈನ್‌ನಲ್ಲಿ ಎಲ್ಲ ಕಡೆ ಪರೀಕ್ಷೆಗಳನ್ನು ನಡೆಸುವ ಬಗ್ಗೆಯೂ ಸರ್ಕಾರಿ ಮತ್ತು-ಖಾಸಗಿ ವಲಯದ ವಿಶ್ವವಿದ್ಯಾಲಯಗಳ ಜತೆ ಸಮಾಲೋಚನೆ ನಡೆಸಲಾಗಿದೆ. ಆದಷ್ಟು ಶೀಘ್ರ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.