ADVERTISEMENT

ಆನಂದ ಮಾಮನಿ ನಿಧನ: ಸಿಎಂ ಬೊಮ್ಮಾಯಿ, ಬಿಎಸ್‌ವೈ, ಎಚ್‌ಡಿಕೆ ಸೇರಿ ಗಣ್ಯರಿಂದ ಸಂತಾಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಅಕ್ಟೋಬರ್ 2022, 4:41 IST
Last Updated 23 ಅಕ್ಟೋಬರ್ 2022, 4:41 IST
ಆನಂದ ಮಾಮನಿ
ಆನಂದ ಮಾಮನಿ    

ಬೆಂಗಳೂರು: ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಆನಂದ ಮಾಮನಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮ‌ಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ವಿಧಾನಸಭೆಯ ಉಪಸಭಾಧ್ಯಕ್ಷರಾದ ಆನಂದ ಮಾಮನಿ ಅವರು ನಿಧನರಾದ ಹಿನ್ನಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಅವರ ಪ್ರಾರ್ಥಿವ ಶರೀರದ ದರ್ಶನ ಪಡೆದು, ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ADVERTISEMENT

‘ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ‌. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಕುಟುಂಬ ವರ್ಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌’ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

‘ಜನಪ್ರಿಯ ಶಾಸಕರು, ವಿಧಾ‌ನಸಭೆಯ ಉಪಸಭಾಧ್ಯಕ್ಷರಾಗಿದ್ದ ಆನಂದ ಮಾಮನಿ ಅವರು ವಿಧಿವಶರಾದ ಸುದ್ದಿ ಅತ್ಯಂತ ಆಘಾತವನ್ನುಂಟು ಮಾಡಿದೆ. ಅವರ ನಿಧನದಿಂದ ನಾಡು ಒಬ್ಬ ಉತ್ತಮ ನಾಯಕನನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ‌. ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು’ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

‘ಸ್ನೇಹಶೀಲತೆ, ಸರಳತೆ, ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದ ವಿಧಾ‌ನಸಭೆ ಉಪಸಭಾಧ್ಯಕ್ಷರಾದ ಆನಂದ ಚಂದ್ರಶೇಖರ ಮಾಮನಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚೇತರಿಸಿಕೊಳ್ಳುತ್ತಾರೆಂಬ ವಿಶ್ವಾಸವಿತ್ತು. ಆದರೆ, ಅವರು ಎಲ್ಲರನ್ನೂ ಬಿಟ್ಟು ಅಗಲಿದ್ದು ನೋವು ತಂದಿದೆ. ಮಾಮಿನಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ.ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಶಾಸಕರು ಹಾಗೂ ವಿಧಾನಸಭೆಯ ಉಪಸಭಾಪತಿ ಆಗಿದ್ದ ಆನಂದ ಮಾಮನಿ ಅವರು ನಿಧನರಾದರು ಎಂಬ ಸುದ್ದಿ ಆಘಾತ ಮೂಡಿಸಿದೆ. ಮೃತರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಮತ್ತು ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿದ್ದಾರೆ.

ವಿಧಾನಸಭೆಯ ಉಪ ಸಭಾಧ್ಯಕ್ಷರು‌‌ ಹಾಗೂ ಸವದತ್ತಿ ಕ್ಷೇತ್ರದ ಶಾಸಕರಾಗಿದ್ದಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಅವರ‌ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬಕ್ಕೆ ಸಾಂತ್ವನಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ತೀವ್ರ ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಆನಂದ ಮಾಮನಿ ಅವರು, ಶನಿವಾರ ಮಧ್ಯರಾತ್ರಿ 12ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿದವರಲ್ಲಿ ಮುಂಚೂಣಿಯಲ್ಲಿದ್ದ ಮಾಮನಿ, ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.