ADVERTISEMENT

ಬಿ.ಎಸ್‌. ಯಡಿಯೂರಪ್ಪ ಜತೆ ಮುಖ್ಯಮಂತ್ರಿ ಬೊಮ್ಮಾಯಿ ಚರ್ಚೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2022, 11:35 IST
Last Updated 23 ಜುಲೈ 2022, 11:35 IST
ಬಿಜೆಪಿ ಶಾಸಕ ಬಿ.ಎಸ್‌. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿಮಾಡಿ ಚರ್ಚೆ ನಡೆಸಿದರು
ಬಿಜೆಪಿ ಶಾಸಕ ಬಿ.ಎಸ್‌. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿಮಾಡಿ ಚರ್ಚೆ ನಡೆಸಿದರು   

ಬೆಂಗಳೂರು: ಶಿಕಾರಿಪುರ ಕ್ಷೇತ್ರವನ್ನು ತಮ್ಮ ಮಗ ಬಿ.ವೈ. ವಿಜಯೇಂದ್ರ ಅವರಿಗೆ ಬಿಟ್ಟು ಕೊಡುವುದಾಗಿ ಶುಕ್ರವಾರ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಿ.ಎಸ್‌. ಯಡಿಯೂರಪ್ಪ ಅವರನ್ನು ಶನಿವಾರ ಭೇಟಿಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆಲಕಾಲ ಚರ್ಚೆ ನಡೆಸಿದರು.

ಯಡಿಯೂರಪ್ಪ ಅವರು ಶಿವಮೊಗ್ಗದಿಂದ ಶನಿವಾರ ಮಧ್ಯಾಹ್ನ ಬೆಂಗಳೂರಿಗೆ ವಾಪಸಾದರು. ಅಧಿಕೃತ ನಿವಾಸ ಕಾವೇರಿಯಲ್ಲಿದ್ದ ಅವರನ್ನು ಭೇಟಿಮಾಡಿದ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್‌. ಅಶೋಕ, ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಕುರಿತ ಹೇಳಿಕೆ ಬಗ್ಗೆ ಚರ್ಚಿಸಿದರು.

ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬೊಮ್ಮಾಯಿ, ‘ಪುನಃ ಸ್ಪರ್ಧಿಸುವಂತೆ ಶಿಕಾರಿಪುರದ ಜನರು ಒತ್ತಾಯ ಮಾಡಿದ್ದರಿಂದ ಯಡಿಯೂರಪ್ಪ ಅವರು ಆ ರೀತಿ ಹೇಳಿಕೆ ನೀಡಿದ್ದರು. ಅವರು ಸಲಹೆ ಮಾತ್ರ ನೀಡಿದ್ದಾರೆ. ಶಿಕಾರಿಪುರ ಸೇರಿದಂತೆ ರಾಜ್ಯದ ಎಲ್ಲ ಕ್ಷೇತ್ರದ ಅಭ್ಯರ್ಥಿಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪಕ್ಷದ ವರಿಷ್ಠರು ಆಯ್ಕೆ ಮಾಡುತ್ತಾರೆ’ ಎಂದರು.

ADVERTISEMENT

ನಿವೃತ್ತಿ ಇಲ್ಲ: ‘ಯಡಿಯೂರಪ್ಪ ಅವರು ರಾಜ್ಯದ ಅತ್ಯಂತ ಜನಪ್ರಿಯ ನಾಯಕ. ಅವರು ರಾಜಕಾರಣದಿಂದ ನಿವೃತ್ತರಾಗುತ್ತಾರೆ ಎಂಬುದು ಸುಳ್ಳು. ಅವರು ನಿವೃತ್ತರಾಗುವುದಿಲ್ಲ. ರಾಜ್ಯ ಪ್ರವಾಸಕ್ಕೆ ಸಿದ್ಧರಿರುವುದಾಗಿ ಹೇಳಿದ್ದಾರೆ. ಆಗಸ್ಟ್‌ 28ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಸಮಾವೇಶದಲ್ಲೂ ಅವರು ಭಾಗವಹಿಸುತ್ತಾರೆ’ ಎಂದು ಹೇಳಿದರು.

‘ಕುಟುಂಬ ರಾಜಕಾರಣಕ್ಕೆ ಬಿಜೆಪಿ ಮಣೆ ಹಾಕುವುದಿಲ್ಲ’ ಎಂಬ ಪ್ರಧಾನಿಯವರ ಹೇಳಿಕೆಯನ್ನು ಮೀರಿ ವಿಜಯೇಂದ್ರ ಅವರಿಗೆ ಟಿಕೆಟ್‌ ನೀಡಲಾಗುವುದೆ ಎಂಬ ಪ್ರಶ್ನೆಗೆ ಉತ್ತರಿಸಿದ ‘ಎಲ್ಲವನ್ನೂ ಪಕ್ಷದ ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ’ ಎಂದರು.

‘ಬಿಜೆಪಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡುತ್ತಿದೆ’ ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆ ಕುರಿತು ಕೇಳಿದಾಗ, ‘ರಾಜ್ಯದಲ್ಲಿ ಕಾಂಗ್ರೆಸ್‌ ಸ್ಥಿತಿ ಅಯೋಮಯವಾಗಿದೆ. ಅವರ ಮನೆಯನ್ನು ಸರಿಯಾಗಿ ನೋಡಿಕೊಳ್ಳಲಿ’ ಎಂದು ಹೇಳಿದರು.

ಸಚಿವ ಅಶೋಕ ಮಾತನಾಡಿ, ‘ಯಡಿಯೂರಪ್ಪ ಅವರು ಪಕ್ಷ ಸಂಘಟನೆ ಪ್ರವಾಸಕ್ಕೆ ಸಜ್ಜಾಗಿದ್ದಾರೆ. ವಾರಕ್ಕೆ ಮೂರು ಕಾರ್ಯಕ್ರಮ ಆಯೋಜಿಸಲು ಸೂಚಿಸಿದ್ದಾರೆ. ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದ ವರಿಷ್ಠರು ಮಾಡುತ್ತಾರೆ’ ಎಂದರು.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.