ADVERTISEMENT

ಗೋಮಾತಾ ಸಹಕಾರ ಸಂಘ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಮೇ 2022, 16:29 IST
Last Updated 6 ಮೇ 2022, 16:29 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಗೋ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದಕ್ಕಾಗಿ ರಾಜ್ಯ ಮಟ್ಟದಲ್ಲಿ ಪ್ರಾಯೋಗಿಕವಾಗಿ ಗೋಮಾತಾ ಸಹಕಾರ ಸಂಘ ಸ್ಥಾಪಿಸಲು ಪ್ರಸ್ತಾವ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಬಜೆಟ್‌ ಅನುಷ್ಠಾನ ಕುರಿತು ಶುಕ್ರವಾರ ವಿವಿಧ ಇಲಾಖೆಯ ಅಧಿಕಾರಿಗಳ ಜತೆ ಸರಣಿ ಸಭೆ ನಡೆಸಿದ ಅವರು, ಪಶು ಸಂಗೋಪನಾ ಇಲಾಖೆಗೆ ಸಂಬಂಧಿಸಿದ ಸಭೆಯಲ್ಲಿ ಈ ಸೂಚನೆ ನೀಡಿದರು. 50 ಪಶು ಚಿಕಿತ್ಸಾಲಯಗಳನ್ನು ಬಾಡಿಗೆ ಆಧಾರದಲ್ಲಿ ಸ್ಥಾಪಿಸುವುದೂ ಸೇರಿದಂತೆ ಬಜೆಟ್‌ನ ಘೋಷಣೆಗಳನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಮೃತ ವಸತಿ ಯೋಜನೆಯೂ ಸೇರಿದಂತೆ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ 6 ಲಕ್ಷ ಮನೆಗಳ ನಿರ್ಮಾಣವನ್ನು ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಎಲ್ಲ ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂಬ ನಿರ್ದೇಶನವನ್ನೂ ವಸತಿ ಇಲಾಖೆ ಅಧಿಕಾರಿಗಳಿಗೆ ನೀಡಿದರು.

ADVERTISEMENT

ರಾಜ್ಯದಲ್ಲಿ ಅರಣ್ಯ ನಾಶದಿಂದ ಉಂಟಾಗುತ್ತಿರುವ ಪರಿಣಾಮಗಳ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ ತಜ್ಞರ ಮೂಲಕ ಅಧ್ಯಯನ ನಡೆಸಬೇಕು. ಪ್ಲಾಸ್ಟಿಕ್‌ ಬಳಕೆ ನಿಯಂತ್ರಣಕ್ಕೆ ವಿಶ್ವ ಬ್ಯಾಂಕ್‌ ರೂಪಿಸಿರುವ ಯೋಜನೆಗೆ ಪೂರಕವಾಗಿ ರಾಜ್ಯದಲ್ಲೂ ಕಾರ್ಯಕ್ರಮ ರೂಪಿಸಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ‘ಪ್ರತಿ ಕಂದಾಯ ವಿಭಾಗದಲ್ಲೂ ತಲಾ 100 ಗ್ರಾಮಗಳಲ್ಲಿ ಹೊಸ ಪಹಣಿಗಳನ್ನು ಆಗಸ್ಟ್‌ ಅಂತ್ಯದೊಳಗೆ ವಿತರಿಸಬೇಕು. ಡ್ರೋನ್‌ ಮೂಲಕ ಭೂಮಾಪನ ನಡೆಸಿ ಕಂದಾಯ ದಾಖಲೆಗಳ ಡಿಜಿಟಲೀಕರಣ ಮಾಡಬೇಕು’ ಎಂದು ಸೂಚಿಸಿದರು.

ಅರಣ್ಯ, ವಸತಿ, ಕಂದಾಯ, ಪಶುಸಂಗೋಪನೆ, ತೋಟಗಾರಿಕೆ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆಗಳಲ್ಲಿ ಬಜೆಟ್‌ ಘೋಷಣೆಗಳ ಅನುಷ್ಠಾನಕ್ಕೆ ನಡೆದಿರುವ ಸಿದ್ಧತೆಯನ್ನು ಮುಖ್ಯಮಂತ್ರಿ ಪರಿಶೀಲಿಸಿದರು. ಇಲಾಖೆ ಸಚಿವರು, ಅಧಿಕಾರಿಗಳು ಹಾಜರಿದ್ದರು.

ಮೆಣಸಿನ ಕಾಯಿಯಿಂದ ಔಷಧಿ: ಅಧ್ಯಯನ

ಮೆಣಸಿನಕಾಯಿಯಿಂದ ಔಷಧಿ ಹಾಗೂ ಸೌಂದರ್ಯವರ್ಧಕಗಳ ತಯಾರಿಕೆಗೆ ಬಳಸುವ ತೈಲ ಉತ್ಪಾದನೆಗೆ ಇರುವ ಅವಕಾಶಗಳ ಕುರಿತು ಅಧ್ಯಯನ ನಡೆಸಿ, ವರದಿ ಸಲ್ಲಿಸಲು ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಬೊಮ್ಮಾಯಿ ಸೂಚಿಸಿದರು.

ಮೆಣಸು ಮತ್ತು ಇತರೆ ಸಾಂಬಾರು ಪದಾರ್ಥಗಳ ಗುಣಮಟ್ಟವನ್ನು ಹೆಚ್ಚಿಸಲು ಬ್ಯಾಡಗಿಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸುವ ಬಗ್ಗೆ ವ್ಯಾಪಾರಸ್ಥರ ಸಲಹೆ ಪಡೆದು ಯೋಜನೆ ರೂಪಿಸುವಂತೆ ನಿರ್ದೇಶನ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.