ADVERTISEMENT

ಮೀಸಲಾತಿ ಹೆಚ್ಚಳ: ನ್ಯಾ. ಸುಭಾಷ್ ಬಿ. ಅಡಿ ಸಮಿತಿ ವರದಿ ಬಳಿಕ ತೀರ್ಮಾನ- ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 28 ಮೇ 2022, 15:51 IST
Last Updated 28 ಮೇ 2022, 15:51 IST
ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟ ಸತ್ಯಾಗ್ರಹ ನಡೆಸುತ್ತಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರನ್ನು ಶನಿವಾರ ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶ್ರೀಗಳಿಗೆ ನಮಸ್ಕರಿಸಿದರು. –ಪ್ರಜಾವಾಣಿ ಚಿತ್ರ
ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟ ಸತ್ಯಾಗ್ರಹ ನಡೆಸುತ್ತಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರನ್ನು ಶನಿವಾರ ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶ್ರೀಗಳಿಗೆ ನಮಸ್ಕರಿಸಿದರು. –ಪ್ರಜಾವಾಣಿ ಚಿತ್ರ   

ಬೆಂಗಳೂರು: ಪರಿಶಿಷ್ಟ ಪಂಗಡದವರ ಮೀಸಲಾತಿ ಪ್ರಮಾಣವನ್ನು ಶೇಕಡ 7.5ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಕುರಿತು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಸುಭಾಷ್‌ ಬಿ. ಅಡಿ ನೇತೃತ್ವದ ತ್ರಿಸದಸ್ಯ ಸಮಿತಿ ವರದಿ ಬಂದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಎಸ್‌.ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸುತ್ತಿರುವ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರನ್ನು ಶನಿವಾರ ಭೇಟಿಮಾಡಿದ ಮುಖ್ಯಮಂತ್ರಿ, ಕೆಲಕಾಲ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ತ್ರಿಸದಸ್ಯ ಸಮಿತಿಯು ಸಲ್ಲಿಸುವ ಅಧ್ಯಯನ ವರದಿಯನ್ನು ಪರಿಶೀಲಿಸಿದ ಬಳಿಕ ಸರ್ಕಾರ ಮುಂದಿನ ಹೆಜ್ಜೆ ಇಡಲಿದೆ’ ಎಂದರು.

‘ಮೀಸಲಾತಿಯ ಒಟ್ಟು ಪ್ರಮಾಣ ಶೇಕಡ 50ರಷ್ಟನ್ನು ಮೀರಬಾರದು ಎಂದು ಸುಪ್ರೀಂಕೋರ್ಟ್‌ ಇಂದಿರಾ ಸಹಾನಿ ಪ್ರಕರಣದಲ್ಲಿ ಸ್ಪಷ್ಟವಾಗಿ ಹೇಳಿದೆ. ಇಂತಹ ಕಾನೂನಾತ್ಮಕ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡೇ ಸರ್ಕಾರ ತೀರ್ಮಾನಕ್ಕೆ ಬರಬೇಕಾಗುತ್ತದೆ. ಈ ಕುರಿತು ವಿರೋಧ ಪಕ್ಷಗಳ ನಾಯಕರ ಜತೆಗೆ ಈಗಾಗಲೇ ಚರ್ಚೆ ನಡೆಸಲಾಗಿದೆ’ ಎಂದು ಹೇಳಿದರು.

ADVERTISEMENT

ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಕೆಲವು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ ದಾಸ್‌ ನೇತೃತ್ವದ ಸಮಿತಿ ಈ ಕುರಿತು ಪರಿಶೀಲನೆ ನಡೆಸಿ ಈಗಾಗಲೇ ವರದಿ ಸಲ್ಲಿಸಿದೆ. ಶಿಕ್ಷಣ, ಉದ್ಯೋಗ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡಗಳ ಜನರ ಪರಿಸ್ಥಿತಿ ಕುರಿತ ಮಾಹಿತಿಗಳು ವರದಿಯಲ್ಲಿವೆ. ಈ ಸಮುದಾಯಗಳಿಗೆ ಒಳ್ಳೆಯದನ್ನು ಮಾಡಬೇಕೆಂಬ ಸದುದ್ದೇಶ ಸರ್ಕಾರಕ್ಕೆ ಇದೆ. ಅವರಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.