ADVERTISEMENT

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಆರೋಗ್ಯ ತಪಾಸಣೆಗೆ ಒಳಗಾಗದ ಮುಖ್ಯಮಂತ್ರಿ!

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2020, 9:47 IST
Last Updated 15 ಮಾರ್ಚ್ 2020, 9:47 IST
ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ   

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಆರೋಗ್ಯ ಇಲಾಖೆಯವರು ಮುಂಜಾಗ್ರತಾ ಕ್ರಮವಾಗಿ ನಡೆಸುವ ತಪಾಸಣೆಗೆ ಒಳಗಾಗಲಿಲ್ಲ.

ಕೊರೊನಾ ವೈರಾಣು ಸೋಂಕು ಹರಡುವ ಭೀತಿಯಿಂದಾಗಿ ಆರೋಗ್ಯ ಇಲಾಖೆ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಯಂತ್ರ ಅಳವಡಿಸಿದೆ. ಸಿಬ್ಬಂದಿಯು, ಸೋಂಕಿತರನ್ನು ಪತ್ತೆ ಹಚ್ಚುವ ಇನ್ಫ್ರಾರೆಡ್ ಥರ್ಮಾಮೀಟರ್ ಯಂತ್ರ ಬಳಸುತ್ತಿದ್ದಾರೆ. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬಂದಿಳಿದ ಮುಖ್ಯಮಂತ್ರಿ ಅವರನ್ನು ತಪಾಸಣೆಗೆ ಒಳಪಡಿಸಲು ಆರೋಗ್ಯ ಇಲಾಖೆ ಸಿಬ್ಬಂದಿ ಅಣಿಯಾಗಿದ್ದರು. ಆದರೆ, ವಿಶ್ರಾಂತಿ ಕೊಠಡಿಯಿಂದ ನೇರವಾಗಿ ಹೊರ ಬಂದ ಮುಖ್ಯಮಂತ್ರಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಳಿಕ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿ, ಅಲ್ಲಿಂದ ತೆರಳಿದರು.

ಬಳಿಕ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಅವರಿಗೆ ಕೊರೊನಾ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಇನ್ಫ್ರಾರೆಡ್ ಥರ್ಮಾಮೀಟರ್ ಯಂತ್ರದ ಮೂಲಕ ಆರೋಗ್ಯ ಇಲಾಖೆ ಸಿಬ್ಬಂದಿ ತಪಾಸಣೆ ನಡೆಸಿ, ಮೂವರ ಆರೋಗ್ಯವೂ ಸ್ಥಿರವಾಗಿದೆ ಎಂದು ಸ್ಥಳದಲ್ಲೇ ವರದಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.