ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ
ಬೆಂಗಳೂರು: ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡುತ್ತಿರುವುದು ಕಾಂಗ್ರೆಸ್ ಪಕ್ಷದ ಸಂವಿಧಾನ ವಿರೋಧಿ ಮನಸ್ಥಿತಿಗೆ ಸಾಕ್ಷಿ ಎಂದು ಕಾಂಗ್ರೆಸ್ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಜಾವಾಣಿ ವರದಿಯನ್ನು ಉಲ್ಲೇಖಿಸಿ ಪೋಸ್ಟ್ ಮಾಡಿರುವ ಅವರು, ‘ಧರ್ಮಾಧಾರಿತ ಮೀಸಲಾತಿ ನೀಡುವುದು ಸಂವಿಧಾನದ ಆಶಯಗಳಿಗೆ ಸಂಪೂರ್ಣವಾಗಿ ವಿರುದ್ಧವಾದದ್ದು ಎಂದು ಸ್ವತಃ ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಹೇಳಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಪಕ್ಷ, ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡುತ್ತಿರುವುದು ಕಾಂಗ್ರೆಸ್ ಪಕ್ಷದ ಸಂವಿಧಾನ ವಿರೋಧಿ ಮನಸ್ಥಿತಿಗೆ ಸಾಕ್ಷಿಯಾಗಿದೆ’ ಎಂದು ಕಿಡಿಕಾರಿದ್ದಾರೆ.
ಅಂದು ಸ್ವಾರ್ಥಕ್ಕಾಗಿ ನೆಹರು ಹಾಗೂ ಜಿನ್ನಾ ಭಾರತವನ್ನು ವಿಭಜಿಸಿದ ರೀತಿ, ಇಂದು ನಾಡದ್ರೋಹಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದಲ್ಲಿ ಧರ್ಮದ ಆಧಾರದ ಮೇಲೆ ಸಮಾಜವನ್ನು ವಿಭಜಿಸಲು ಹೊರಟಿದ್ದಾರೆ ಎಂದು ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂವಿಧಾನ ವಿರೋಧಿ, ಧರ್ಮಾಧಾರಿತ ಮೀಸಲಾತಿಯನ್ನು ರದ್ದುಗೊಳಿಸುವವರೆಗೂ ಬಿಜೆಪಿ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.