ADVERTISEMENT

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ಆಗ್ರಹಿಸಿ ಮೋದಿಗೆ ಎಚ್‌ಡಿಕೆ ಪತ್ರ

​ಪ್ರಜಾವಾಣಿ ವಾರ್ತೆ
Published 3 ಜೂನ್ 2019, 16:40 IST
Last Updated 3 ಜೂನ್ 2019, 16:40 IST
   

ಬೆಂಗಳೂರು: ಕಾಯಕಯೋಗಿ, ತ್ರಿವಿಧ ದಾಸೋಹಿ,ನಡೆದಾಡುವ ದೇವರು ಎಂದು ಜನಮಾನಸದಿಂದ ಕರೆಸಿಕೊಂಡಿದ್ದ ತುಮಕೂರಿನ ಸಿದ್ಧಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರಸ್ವಾಮೀಜಿ ಅವರಿಗೆ ಮರಣೋತ್ತರ ಭಾರತ ರತ್ನ ಗೌರವ ನೀಡಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

ಪ್ರಧಾನಿಗೆ ಕುಮಾರಸ್ವಾಮಿ ಅವರುಬರೆದಿರುವ ಪತ್ರವನ್ನು ಮುಖ್ಯಮಂತ್ರಿಗಳ ಕಚೇರಿ ಸೋಮವಾರಮಾಧ್ಯಮಗಳಿಗೆ ಬಿಡುಗಡೆ ಮಾಡಿದೆ.

‘ತುಮಕೂರಿನ ಸಿದ್ಧಗಂಗಾ ಮಠಕ್ಕೆ 600 ವರ್ಷಗಳ ಪರಂಪರೆ ಇದೆ. 1941ರಿಂದ 2019ರ ವರೆಗೆ ಶ್ರೀ ಶಿವಕುಮಾರಸ್ವಾಮೀಜಿ ಅವರ ಉಸ್ತುವಾರಿಯಲ್ಲಿದ್ದ ಮಠ, ಸಾಮಾಜಿಕ ಸೇವೆಯಲ್ಲಿ ಮಾದರಿ ಎನಿಸುವ ಕಾರ್ಯಗಳನ್ನು ಮಾಡಿದೆ. ನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಶ್ರೀಗಳು ಸ್ಥಾಪಿಸಿದ ವಿದ್ಯಾಕೇಂದ್ರಗಳು ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿವೆ.’

ADVERTISEMENT

‘ಸಿದ್ಧಗಂಗ ಶ್ರೀಗಳು ತ್ರಿವಿಧ ದಾಸೋಹಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ಸಿದ್ಧಗಂಗಾ ಶ್ರೀಗಳು ಸಮಾಜಕ್ಕೆ ಸಲ್ಲಿಸಿರುವ ಸೇವೆಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಸಲ್ಲುವುದು ಉಚಿತ. ಎಲ್ಲ ನಾಗರಿಕರು, ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳ ಆಶಯವೂ ಅದೇ ಆಗಿದೆ. ಆದ್ದರಿಂದ ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಲಿಂಗೈಕ್ಯ ಶಿವಕುಮಾರಸ್ವಾಮೀಜಿಗಳ ಹೆಸರನ್ನು ಮರಣೋತ್ತರಭಾರತ ರತ್ನ ಪ್ರಶಸ್ತಿಗೆ ಪರಿಗಣಿಸಬೇಕು ಎಂದು ನಾನು ಮನವಿ ಮಾಡುತ್ತೇನೆ,’ ಎಂದು ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.