ADVERTISEMENT

ಸಿ.ಎಂ ಮೂಲಸೌಕರ್ಯ ಅನುದಾನ: ಶಾಸಕರಿಗೆ ಶೇ 25 ಮೀಸಲು; ಸರ್ಕಾರ ಅನುಮತಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 15:27 IST
Last Updated 27 ಜೂನ್ 2025, 15:27 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ಮುಖ್ಯಮಂತ್ರಿ ಅವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೆ ನೀಡಿದ ಅನುದಾನದಲ್ಲಿ ಆಯಾ ಶಾಸಕರು ತಮ್ಮ ವಿವೇಚನಾ ಕೋಟಾದ ಕಾಮಗಾರಿಗಳಿಗೆ ಶೇ 25ರಷ್ಟು ಮೊತ್ತ ಬಳಸಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ.

ಮುಖ್ಯಮಂತ್ರಿ ಅವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಕುರಿತು ಆರ್ಥಿಕ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಆಯಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶೇ 50ರಷ್ಟು ಅನುದಾನವನ್ನು ಲೋಕೋಪಯೋಗಿ ಇಲಾಖೆಯ ರಸ್ತೆ, ಸೇತುವೆ ಕಾಮಗಾರಿಗಳಿಗೆ, ಶೇ 25ರಷ್ಟು ಗ್ರಾಮೀಣ ರಸ್ತೆ ಮತ್ತು ಮೂಲಸೌಕರ್ಯ ಕಾಮಗಾರಿಗಳಿಗೆ ವಿನಿಯೋಗಿಸಲು ಸೂಚಿಸಿದೆ.

ADVERTISEMENT

ಶಿಕ್ಷಣ, ಆರೋಗ್ಯ, ಕುಡಿಯುವ ನೀರು ಮತ್ತು ನೈರ್ಮಲ್ಯ ಒದಗಿಸುವುದು. ಕೃಷಿ ಮತ್ತು ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ರಸ್ತೆಗಳ ನಿರ್ಮಾಣ, ಜನರ ದೈನದಂದಿನ ಕಾರ್ಯಗಳಿಗೆ ಅಗತ್ಯವಾದ ಮೂಲಸೌಕರ್ಯ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ.

₹10 ಕೋಟಿವರೆಗಿನ ಕಾಮಗಾರಿಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಆಡಳಿತಾತ್ಮಕ ಅನುಮೋದನೆ ನೀಡಬೇಕು. ₹10 ಕೋಟಿಗೂ ಅಧಿಕ ಮೊತ್ತಕ್ಕೆ ಸಚಿವ ಸಂಪುಟದ ಅನುಮೋದನೆ ಪಡೆಯಬೇಕು. ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯ ಕಾಮಗಾರಿಗಳ ಕನಿಷ್ಠ ಮೊತ್ತ ₹1 ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಇತರೆ ಇಲಾಖೆಗಳ ಕಾಮಗಾರಿಗಳ ಕನಿಷ್ಠ ಮೊತ್ತ ₹20 ಲಕ್ಷಕ್ಕೆ ನಿಗದಿ ಮಾಡಲಾಗಿದೆ. ಭೂಸ್ವಾಧೀನ ಕಾಮಗಾರಿ, ಆಡಳಿತಾತ್ಮಕ ವೆಚ್ಚಗಳಿಗೆ ಮುಖ್ಯಮಂತ್ರಿ ಅವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಬಳಕೆ ಮಾಡಿಕೊಳ್ಳುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. 

ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಲ್ಲಿ ಕೈಗೆತ್ತಿಕೊಳ್ಳುವ ಎಲ್ಲ ಕಾಮಗಾರಿಗಳಿಗೂ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಪರಿಷತ್ತಿನ ಅನುಮೋದನೆ ಪಡೆದುಕೊಳ್ಳಬೇಕು. ಯೋಜನೆಯ ಅನುಷ್ಠಾನ ಮತ್ತು ಉಸ್ತುವಾರಿಗೆ ಪ್ರತಿ ಜಿಲ್ಲೆಯಲ್ಲೂ ಆಯಾ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಬೇಕು ಎಂದು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.