ADVERTISEMENT

ಸಿಎಂ ಜನಸ್ಪಂದನ: ಕಿಡ್ನಿ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗೆ ₹1 ಲಕ್ಷ ಪರಿಹಾರ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2023, 6:55 IST
Last Updated 27 ನವೆಂಬರ್ 2023, 6:55 IST
   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಮ್ಮಿಕೊಂಡ ಜನಸ್ಪಂದನಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾವಿರಾರು ಮಂದಿ ತಮ್ಮ ಅಹವಾಲು ಸಲ್ಲಿಸಲು ಬಂದಿದ್ದಾರೆ.

ಕಿಡ್ನಿ ಕಾಯಿಲೆಯಿಂದ ಬಳಲುತ್ತಿರುವ ತಮ್ಮ ಸಹೋದರ ವೆಂಕಟರಾಜ್‌ ಎಂಬವವರ ನೆರವಿಗೆ ಬರುವಂತೆ ಬಸವರಾಜು ಎಂಬವರು ಮನವಿ ಮಾಡಿದರು. ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ, ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಯಿಂದ ಸ್ಥಳದಲ್ಲಿಯೇ ₹ 1 ಲಕ್ಷ ನೆರವು ಮಂಜೂರು ಮಾಡಿದರು.

ಹುಣಸೂರಿನ‌ ಕಲ್ಲಹಳ್ಳಿ ಪಂಚಾಯಿತಿ ಲಕ್ಷ್ಮೀಬಾಯಿ ಎನ್ನುವವರು ಅಲೆಮಾರಿ ಡೋಂಗ್ರಿ ಗೆರೆಸಿಯಾ ಸಮುದಾಯದವರಿಗೆ 40 ಮನೆಗಳು ಮಂಜೂರಾಗಿವೆ. ಮನೆ ಕಟ್ಟಲು ಮಂಜೂರಾತಿ ನೀಡುವಂತೆ ಮನವಿ ಮಾಡಿದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿ, ಅಲೆಮಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ಕರೆದು, ಅರ್ಜಿಯನ್ನು ಸಮಗ್ರವಾಗಿ ಪರಿಶೀಲಿಸಿ ಅಗತ್ಯ ಕ್ರಮ ವಹಿಸಿ ತಮಗೆ ವರದಿ ನೀಡುವಂತೆ ಸೂಚಿಸಿದರು.

ADVERTISEMENT

ತಮ್ಮ ಮನೆಯನ್ನು ಜಿಲ್ಲಾ ಪಂಚಾಯಿತಿಯವರು ಅಕ್ರಮವಾಗಿ ಪ್ರವೇಶ ಮಾಡಿರುವ ಬಗ್ಗೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಸೀಮಾ ಬಾನು ಅವರು ದೂರು ಸಲ್ಲಿಸಿದರು. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಡಿ.ಪಿ. ಭಾಗ್ಯ ಅವರ ಮನೆ ಶೇ 60  ಹಾನಿಯಾಗಿದ್ದು ಶೇ 100 ರ ಪರಿಹಾರ ಒದಗಿಸಿಕೊಡುವಂತೆ ಮನವಿ ಸಲ್ಲಿಸಿದರು

ಎಲ್ಲ ಮನವಿಗಳನ್ನು ಆದ್ಯತೆ ಮೇಲೆ ಪರಿಗಣಿಸಿ ಸಮಸ್ಯೆಯನ್ನು ಪರಿಶೀಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.