ADVERTISEMENT

ಮೈತ್ರಿ ಸರ್ಕಾರದ ಯೋಜನೆ ರದ್ದುಗೊಳಿಸುವ ಬಿಎಸ್‌ವೈ ಟಿಪ್ಪಣಿಗೆ ಹೈಕೋರ್ಟ್ ಬೇಸರ

‘ಮುಖ್ಯಮಂತ್ರಿಗಳ ನವ ಬೆಂಗಳೂರು ಯೋಜನೆ’ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ ಸ್ಥಗಿತಕ್ಕೆ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 29 ಜನವರಿ 2020, 2:16 IST
Last Updated 29 ಜನವರಿ 2020, 2:16 IST
ಕರ್ನಾಟಕ ಹೈಕೋರ್ಟ್ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಕರ್ನಾಟಕ ಹೈಕೋರ್ಟ್ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಬೆಂಗಳೂರು: ‘ಮುಖ್ಯಮಂತ್ರಿಗಳ ನವ ಬೆಂಗಳೂರು ಯೋಜನೆ’ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಸೂಚಿಸಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಯಾವ ಕಾನೂನಿನ ವ್ಯಾಪ್ತಿಯಲ್ಲಿ ಟಿಪ್ಪಣಿ ಬರೆದಿದ್ದಾರೆ’ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.

ಈ ಕುರಿತಂತೆ ದಾಸರಹಳ್ಳಿ–ರಾಚೇನಹಳ್ಳಿ ಕೆರೆ ಅಭಿವೃದ್ಧಿ ಮತ್ತು ಸಂರಕ್ಷಣೆ ಟ್ರಸ್ಟ್‌ ಅಧ್ಯಕ್ಷ ಕೆ.ನವೀನ್‌ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್‌.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ, ‘ಮುಖ್ಯಮಂತ್ರಿಗಳ ಟಿಪ್ಪಣಿ ಕಾನೂನು ಬಾಹಿರವಾಗಿದೆ. ಈಗಾಗಲೇ ಹಲವು ಅಭಿವೃದ್ಧಿ ಕಾಮಗಾರಿಗಳು ಚಾಲ್ತಿಯಲ್ಲಿವೆ. ಮುಂಬರುವ ಮಳೆಗಾಲದ ಅವಧಿಯೊಳಗೆ ಪೂರ್ಣಗೊಳ್ಳದೇ ಹೋದರೆ ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ಈ ಹಂತದಲ್ಲಿ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿರುವುದರಿಂದ ಯೋಜನಾ ವೆಚ್ಚ ಏರಿಕೆಯಾಗಿ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗುತ್ತದೆ’ ಎಂದು ಆಕ್ಷೇಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಮುಖ್ಯಮಂತ್ರಿಗಳು ಕಾನೂನಿನ ಯಾವ ಅಧಿಕಾರ ಬಳಸಿ ಈ ಆದೇಶ ಹೊರಡಿಸಿದ್ದಾರೆ, ಟಿಪ್ಪಣಿ ಬರೆದು ಎಲ್ಲಾ ಕಾಮಗಾರಿಗಳನ್ನು ನಿಲ್ಲಿಸುವುದು ಸರಿಯೇ, ಬಿಬಿಎಂಪಿಗೆ ನಿರ್ದೇಶನ ನೀಡುವ ಅಧಿಕಾರ ಸರ್ಕಾರಕ್ಕೆ ಇರಬಹುದು. ಆದರೆ,‌‌ ಟಿಪ್ಪಣಿ ಬರೆದಾಕ್ಷಣ ಸ್ಥಗಿತಗೊಳಿಸುವುದು ವಿಧಾನವಲ್ಲ’ ಎಂದು ಹೇಳಿತು.

ADVERTISEMENT

‘ಕಾಮಗಾರಿ ವಿಳಂಬದಿಂದ ವೆಚ್ಚ ಹೆಚ್ಚಾದರೆ ಅದಕ್ಕೆ ಹೊಣೆ ಯಾರು, ಈ ಹಿಂದಿನ ಸರ್ಕಾರದ ಯೋಜನೆಗಳನ್ನು ಅಧಿಕಾರಕ್ಕೆ ಬಂದ ತಕ್ಷಣ ಹೀಗೆ ತಡೆಹಿಡಿಯಬಹುದೇ ಎಂಬುದರ ಕುರಿತು ವಿವರಣೆ ನೀಡಬೇಕು ಇಲ್ಲವೇ ಆದೇಶವನ್ನು ಹಿಂಪಡೆಯಬೇಕು’ ಎಂದು ಸರ್ಕಾರಕ್ಕೆ ಮೌಖಿಕ ತಾಕೀತು ಮಾಡಿ ವಿಚಾರಣೆ ಮುಂದೂಡಿದೆ.

ಮಧ್ಯಂತರ ಮನವಿ ಏನು?: ‘ಸರ್ಕಾರದ ಆದೇಶ ಮುಖ್ಯಮಂತ್ರಿಗಳ ಟಿಪ್ಪಣಿ ಆಧರಿಸಿದೆ. ಟಿಪ್ಪಣಿಯು ಕಾನೂನು ಬಾಹಿರ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಆದ್ದರಿಂದ ಕಾಮಗಾರಿ ಕೈಗೊಳ್ಳಲು ರಾಜ್ಯ ಸರ್ಕಾರ 2019ರ ಫೆಬ್ರುವರಿ 1ರಲ್ಲಿ ನೀಡಿರುವ ಆದೇಶದ ಅನುಸಾರ ಕಾಮಗಾರಿ ಮುಂದುವರಿಸಲು ನಿರ್ದೇಶಿಸಬೇಕು. ಅರ್ಜಿ ಇತ್ಯರ್ಥವಾಗುವವರೆಗೆ 2019ರ ಸರ್ಕಾರದ ಆದೇಶದಲ್ಲಿ ಯಾವುದೇ ಬದಲಾವಣೆ, ಸ್ವರೂಪ ಮಾರ್ಪಾಡು ಅಥವಾ ರದ್ದುಗೊಳಿಸುವುದು ಇಲ್ಲವೇ ಕಾಮಗಾರಿಯಲ್ಲಿ ಮಧ್ಯಪ್ರವೇಶಿಸದಂತೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಮಧ್ಯಂತರ ಕೋರಿಕೆ.

ಏನಿದು ಯೋಜನೆ?

ಈ ಹಿಂದಿನ ಜೆಡಿಎಸ್–ಕಾಂಗ್ರೆಸ್‌ ಮೈತ್ರಿ ಸರ್ಕಾರದ ಮಹತ್ವಾಕಾಂಕ್ಷೆಯ ‘ಮುಖ್ಯಮಂತ್ರಿಗಳ ನವ ಬೆಂಗಳೂರು ಯೋಜನೆ’ಯನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ರದ್ದುಗೊಳಿಸಿತ್ತು.

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣ, ಮಳೆ ನೀರು ಮೋರಿ, ಕಸ ವಿಲೇವಾರಿ ಹಾಗೂ ವೈಟ್‌ ಟಾಪಿಂಗ್‌ಗಳಂತಹ ಮೂಲಸೌಕರ್ಯ ಅಭಿವೃದ್ಧಿಗಾಗಿ ಈ ಯೋಜನೆ ಘೋಷಣೆ ಮಾಡಲಾಗಿತ್ತು. ನಗರದ ಅಭಿವೃದ್ಧಿಗೆ ಮೂರು ವರ್ಷಗಳಲ್ಲಿ ₹ 8,015 ಕೋಟಿ ವೆಚ್ಚ ಮಾಡಲು ಉದ್ದೇಶಿಸಿ ಸಚಿವ ಸಂಪುಟದ ಅನುಮೋದನೆಯನ್ನೂ ಪಡೆಯಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.