
ಮೈಸೂರು: ‘ಕೆಲವು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಕುರಿತು ಈ ಬಾರಿಯ ಬಜೆಟ್‌ನಲ್ಲೇ ಘೋಷಣೆ ಮಾಡಲಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಖಾಸಗಿ ಕಾರ್ಯಕ್ರಮಕ್ಕೆಂದು ಬುಧವಾರ ಇಲ್ಲಿನ ವಿಮಾನನಿಲ್ದಾಣಕ್ಕೆ ಬಂದಿಳಿದ ವೇಳೆ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.
‘ನಾವು ನೇಮಕಾತಿ ನಡೆಸುತ್ತಿದ್ದೇವೆ. ಒಳಮೀಸಲಾತಿ ಸಮಸ್ಯೆ ಇದ್ದಿದ್ದರಿಂದ ಸ್ವಲ್ಪ ವಿಳಂಬವಾಗಿದೆ. ಕೊಟ್ಟ ಮಾತಿನಂತೆ ಹುದ್ದೆ ಭರ್ತಿ ಮಾಡುತ್ತೇವೆ’ ಎಂದರು.
‘ಧಾರವಾಡದಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿಗಳೇಕೆ ಇವರನ್ನು (ಬಿಜೆಪಿಯವರನ್ನು) ಬಿಟ್ಟು ಬೇರೆಡೆ ಸಭೆ ನಡೆಸಿದರು? ಪ್ರಧಾನಿ ನರೇಂದ್ರ ಮೋದಿ ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇವೆ ಎಂದಿದ್ರಲ್ಲ ಏನಾಯಿತು? ಅವರು ಅಧಿಕಾರಕ್ಕೆ ಬಂದು 11 ವರ್ಷಗಳಾದವು. ಈವರೆಗೆ ಎಷ್ಟು ಉದ್ಯೋಗ ಕೊಡಬೇಕಾಗಿತ್ತು? ಬಿಜೆಪಿಯವರು ರಾಜ್ಯದಲ್ಲಿ 4 ವರ್ಷ ಅಧಿಕಾರದಲ್ಲಿದ್ದಾಗ ಎಷ್ಟು ಕೆಲಸ ಕೊಟ್ಟರು? ನಮ್ಮನ್ನು ಪ್ರಶ್ನಿಸಲು ಅವರಿಗೆ ಯಾವ ನೈತಿಕ ಹಕ್ಕಿದೆ’ ಎಂದು ಪ್ರಶ್ನಿಸಿದರು.
ಆರೋಗ್ಯ ಇಲಾಖೆಯಿಂದ ಆಹ್ವಾನ ಪತ್ರಿಕೆಯನ್ನು ಉರ್ದು ಭಾಷೆಯಲ್ಲೂ ಮುದ್ರಿಸಿದ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಕುರಿತು ಮಾತನಾಡಿದ ಅವರು, ‘ಉರ್ದು ಪತ್ರಿಕೆಗಳಿಗೂ ಜಾಹೀರಾತು ಕೊಡಬೇಕಲ್ಲವೇ? ಆಗ ಅದು ಉರ್ದುನಲ್ಲೇ ಇರಬೇಕಲ್ಲವೇ?’ ಎಂದರು.
‘ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನನ್ನೂ ಮಾಡುವುದಿಲ್ಲ. ವಿರೋಧ ಪಕ್ಷದಲ್ಲಿದ್ದಾಗ ಪ್ರತಿಭಟಿಸುವುದೇ ಅವರ ಚಾಳಿ’ ಎಂದು ಟೀಕಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಶಾಸಕರಾದ ಕೆ.ಹರೀಶ್‌ಗೌಡ, ಡಿ.ರವಿಶಂಕರ್, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ. ವಿಜಯ್‌ಕುಮಾರ್ ಹಾಗೂ ನಗರ ಜಿಲ್ಲಾ ಸಮಿತಿಯ ಅಧ್ಯಕ್ಷ ಆರ್.ಮೂರ್ತಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.