ADVERTISEMENT

ಸಂಪುಟ ಪುನರ್‌ರಚನೆ: ತಳ್ಳಿ ಹಾಕಿದ ಸಿಎಂ, ಡಿಸಿಎಂ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2024, 10:11 IST
Last Updated 29 ನವೆಂಬರ್ 2024, 10:11 IST
<div class="paragraphs"><p>ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

   

ನವದೆಹಲಿ: ‘ಸಚಿವ ಸಂಪುಟ ಪುನರ್ ರಚನೆ ಸದ್ಯಕ್ಕಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.   

ನವದೆಹಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ಶುಕ್ರವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದ ಬಳಿಕ ಸಿದ್ದರಾಮಯ್ಯ ಸುದ್ದಿಗಾರರ ಜತೆಗೆ ಮಾತನಾಡಿದರು. 

ADVERTISEMENT

ಸಚಿವ ಸಂಪುಟ ವಿಸ್ತರಣೆ, ಪುನರ್‌ ರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮದವರೇ ಹೊರತು ನಾನಲ್ಲ ಎಂದು ಅವರು ಹೇಳಿದರು. ‘ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ, ಈ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು’ ಎಂದರು.

‘ಸಚಿವ ಸಂಪುಟ ಪುನರ್ ರಚನೆ ಕುರಿತು ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ, ಈಗಲೇ ಅಲ್ಲ’ ಎಂದು ಹೇಳಿದರು.

ಡಿ.ಕೆ. ಶಿವಕುಮಾರ್‌ ಮಾತನಾಡಿ, ‘ಸಂದರ್ಭ ಬಂದಾಗ ಸಂಪುಟ ಪುನರ್ ರಚನೆ ಆಗುತ್ತದೆ. ಈಗ ಆ ಸಂದರ್ಭ ಒದಗಿ ಬಂದಿಲ್ಲವಲ್ಲ. ಸಂಪುಟದಲ್ಲಿ ಒಂದು ಸಚಿವ ಸ್ಥಾನ ಖಾಲಿ ಇದ್ದು, ಅದನ್ನು ತುಂಬುವ ಬಗ್ಗೆಯೂ ಚರ್ಚೆ ನಡೆದಿಲ್ಲ’ ಎಂದರು. 

ರಾಹುಲ್‌ ಜತೆಗೆ ಚರ್ಚೆ: ‘ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ. ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ’ ಎಂದು ಸಿದ್ದರಾಮಯ್ಯ ತಿಳಿಸಿದರು. 

ಸಮಾವೇಶ ಕುರಿತಂತೆ ಹೈಕಮಾಂಡ್‌ಗೆ ಅನಾಮಧೇಯ ಪತ್ರ ಬರೆದಿರುವ ಬಗ್ಗೆ ಮಾಹಿತಿ ಇಲ್ಲ. ಖರ್ಗೆ ಅವರೂ ಈ ಬಗ್ಗೆ ಚರ್ಚೆ ಮಾಡಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. 

ಶಿವಕುಮಾರ್‌ ಮಾತನಾಡಿ, ‘ಅನಾಮಧೇಯ ಪತ್ರದ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾವ ಕಾರಣಕ್ಕೆ ಸಮಾವೇಶ ಮಾಡಲಾಗುತ್ತಿದೆ ಎಂಬ ಬಗ್ಗೆ ಮುಖ್ಯಮಂತ್ರಿಯವರು ನನಗೆ ಮೊದಲೇ ತಿಳಿಸಿದ್ದಾರೆ. ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ. ಮುಖ್ಯಮಂತ್ರಿಯವರು ಹಾಗೂ ನಾನು ಭೇಟಿಯಾಗಿ ಮೂರು ನಾಲ್ಕು ದಿನಗಳಾಗಿವೆ. ಸಮಾವೇಶದಲ್ಲಿ ಪಕ್ಷದ ಭಾಗವಹಿಸುವಿಕೆ ಖಂಡಿತ ಇದ್ದೇ ಇರುತ್ತದೆ’ ಎಂದರು.

ಹಾಸನ ಸಮಾವೇಶದ ಬಗ್ಗೆ ರಾಹುಲ್ ಗಾಂಧಿ ಅವರ ಜೊತೆ ಮುಖ್ಯಮಂತ್ರಿ ಚರ್ಚಿಸಿದರು. ಜೆಡಿಎಸ್ ಭದ್ರಕೋಟೆಯಲ್ಲಿ ಸಮಾವೇಶ ನಡೆಸಿದರೆ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಅನುಕೂಲವಾಗಲಿದೆ ಎಂದು ಸಿದ್ದರಾಮಯ್ಯ ವಿವರಿಸಿದರು. ಪಕ್ಷದ ಎಲ್ಲ ನಾಯಕರೂ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದೂ ಮಾಹಿತಿ ನೀಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.