
ಬೆಂಗಳೂರು: ‘16ನೇ ಹಣಕಾಸು ಆಯೋಗದ ಮುಂದೆ ರಾಜ್ಯ ಸರ್ಕಾರವು ನ್ಯಾಯಯುತ ತೆರಿಗೆ ಪಾಲು, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ, ವಿಶೇಷ ಅನುದಾನ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಮಂಡಿಸಿದ್ದು, ಅದಕ್ಕೆ ಸಂಬಂಧಿಸಿದಂತೆ ನನ್ನ ಸಾಮಾಜಿಕ ಜಾಲತಾಣದಲ್ಲಿ ‘ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ’ ಎಂಬ ಅಭಿಯಾನ ಆರಂಭಿಸಿದ್ದೇನೆ. ಈ ಅಭಿಯಾನವನ್ನು ಬೆಂಬಲಿಸಬೇಕು’ ಎಂದು ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ತಮ್ಮ ‘ಎಕ್ಸ್’ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು, ‘14ನೇ ಹಣಕಾಸು ಆಯೋಗಕ್ಕೆ (ಶೇ 4.71ರಷ್ಟು) ಹೋಲಿಸಿದರೆ 15ನೇ ಹಣಕಾಸು ಆಯೋಗದಲ್ಲಿ ತೆರಿಗೆ ಪಾಲು ಶೇ 3.64ಕ್ಕೆ ಇಳಿಸುವ ಮೂಲಕ ಘೋರ ಅನ್ಯಾಯ ಮಾಡಲಾಗಿದೆ. ಉದಾಹರಣೆಗೆ, ರಾಜ್ಯಗಳಿಗೆ ಹಂಚಿಕೆ ಮಾಡುವ ₹ 100ರಲ್ಲಿ ಮೊದಲು ಕರ್ನಾಟಕಕ್ಕೆ ₹4.71 ಸಿಗುತ್ತಿದ್ದರೆ 15ನೇ ಆಯೋಗವು ಅದನ್ನು ₹ 3.64 ಇಳಿಸಿತು. ಇದರಿಂದ ರಾಜ್ಯಕ್ಕೆ ಸುಮಾರು ₹ 80 ಸಾವಿರ ಕೋಟಿಯಷ್ಟು ಅನುದಾನ ಕೈತಪ್ಪಿ, ಅನ್ಯಾಯವಾಯಿತು’ ಎಂದಿದ್ದಾರೆ.
‘ತೆರಿಗೆ, ಸೆಸ್ ಮುಂತಾದ ರೂಪದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕದಿಂದ ₹ 4.5 ಲಕ್ಷ ಕೋಟಿಯಿಂದ ₹ 5 ಲಕ್ಷ ಕೋಟಿಗಳಷ್ಟು ಸಂಗ್ರಹಿಸುತ್ತದೆ. ಆದರೆ, ಕೇಂದ್ರದಿಂದ ಅತ್ಯಂತ ಕಡಿಮೆ ತೆರಿಗೆ ಪಾಲು ಮತ್ತು ಅನುದಾನ ಪಡೆಯುವ ರಾಜ್ಯ ಕರ್ನಾಟಕ. ಹೀಗಾಗಿ 14ನೇ ಹಣಕಾಸು ಆಯೋಗವು ನೀಡಿದ್ದ ಶೇ 4.71ರಷ್ಟು ಪಾಲನ್ನು ಕೊಟ್ಟರೆ ನಾವು ನಿಟ್ಟುಸಿರು ಬಿಡುವಂತಾಗುತ್ತದೆ. ಅದಕ್ಕಿಂತ ಹೆಚ್ಚು ಕೊಟ್ಟರೆ ಮಾತ್ರ ನೈಜವಾಗಿ ನ್ಯಾಯ ಸಿಕ್ಕಂತಾಗುತ್ತದೆ’ ಎಂದೂ ಹೇಳಿದ್ದಾರೆ.
‘ಜನಸಂಖ್ಯೆಯನ್ನು 1971ರ ಬದಲಾಗಿ 2011 ಅನ್ನು ಆಧಾರವಾಗಿರಿಸಿಕೊಂಡ ಕಾರಣದಿಂದಲೂ ನಮಗೆ ಅನ್ಯಾಯವಾಗಿದೆ. 1971ರ ಜನಸಂಖ್ಯೆಯನ್ನೇ ಮಾನದಂಡವನ್ನಾಗಿ ಇಟ್ಟುಕೊಳ್ಳಬೇಕು ಹಾಗೂ ಜನಸಂಖ್ಯೆಗೆ ನಿಗದಿಪಡಿಸಿರುವ ಪ್ರಾಮುಖ್ಯವನ್ನು ವೈಜ್ಞಾನಿಕವಾಗಿ ಪರಿಗಣಿಸಬೇಕು.ಕಲ್ಯಾಣ ಕರ್ನಾಟಕ ಭಾಗದ ಪರಿಸರ ಸಂರಕ್ಷಣೆ ಮತ್ತು ವಿಪತ್ತು ನಿರ್ವಹಣೆಗಾಗಿ ₹ 10 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ನೀಡಬೇಕು’ ಎಂದೂ ಒತ್ತಾಯಿಸಿದ್ದಾರೆ.
ಬೆಂಗಳೂರಿನ ಅಭಿವೃದ್ಧಿಗೆ ಐದು ವರ್ಷಗಳಲ್ಲಿ ₹1.15 ಲಕ್ಷ ಕೋಟಿ ಹೂಡಿಕೆ ಅಗತ್ಯವಿದ್ದು 16ನೇ ಹಣಕಾಸು ಆಯೋಗವು ಕನಿಷ್ಠ ₹ 27793 ಕೋಟಿ ನೀಡುವಂತೆ ಶಿಫಾರಸು ಮಾಡಬೇಕುಸಿದ್ದರಾಮಯ್ಯ ಮುಖ್ಯಮಂತ್ರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.