ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ‘ಹಿಂದೂಗಳನ್ನು ಒಗ್ಗೂಡಿಸುವ ಕಾರ್ಯಕ್ರಮ ಆಗಬೇಕಾಗಿದ್ದ ಅಯೋಧ್ಯೆಯ ರಾಮಲಲ್ಲಾ ಪ್ರತಿಷ್ಠಾಪನೆ ಬಿಜೆಪಿಯ ರಾಜಕೀಯದಿಂದಾಗಿ ಹಿಂದೂಗಳನ್ನು ಒಡೆಯುವ ಕಾರ್ಯಕ್ರಮ ಆಗಿರುವುದು ದುರಂತ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
‘ರಾಮಮಂದಿರದಲ್ಲಿ ಶೈವರು-ಶಾಕ್ತರಿಗೆ ಅಧಿಕಾರ ಇಲ್ಲ ಎಂಬ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ ನೀಡಿರುವ ಹೇಳಿಕೆ ನಿಜವೆಂದಾದರೆ, ಅದು ಶೈವ ಆರಾಧಕರಿಗೆ ಮಾಡಿರುವ ಅವಮಾನ. ಶಂಕರಾಚಾರ್ಯರು ಸ್ಥಾಪಿಸಿದ ವಿವಿಧ ಪೀಠದವರು ರಾಮಮಂದಿರವನ್ನು ರಾಜಕೀಯಕ್ಕಾಗಿ ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿ ಕಾರ್ಯಕ್ರಮ ಬಹಿಷ್ಕರಿಸುವುದಾಗಿ ಹೇಳಿರುವುದೂ ವರದಿಯಾಗಿದೆ’ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಇನ್ನೇನು ಹತ್ತು ವರ್ಷಗಳ ಆಡಳಿತ ಪೂರ್ಣಗೊಳಿಸಲಿರುವ ಪ್ರಧಾನಿ ನರೇಂದ್ರ ಮೋದಿಗೆ ತಮ್ಮ ಸಾಧನೆಯನ್ನು ಮತದಾರರ ಮುಂದಿಟ್ಟು ಚುನಾವಣೆ ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಹೀಗಾಗಿ, ಅಪೂರ್ಣ ಸ್ಥಿತಿಯಲ್ಲಿರುವ ರಾಮಮಂದಿರವನ್ನು ಲೋಕಸಭಾ ಚುನಾವಣೆಯ ಸಮಯದಲ್ಲಿ ಅವಸರದಿಂದ ಉದ್ಘಾಟಿಸಲು ಮುಂದಾಗಿದ್ದಾರೆ. ಆ ಮೂಲಕ ಹಿಂದುತ್ವದ ಅಲೆ ಬಡಿದೆಬ್ಬಿಸಿ, ಅದರ ಮರೆಯಲ್ಲಿ ತಮ್ಮ ವೈಫಲ್ಯ ಮುಚ್ಚಿಹಾಕುವ ಪ್ರಯತ್ನ ನಡೆಸಿದ್ದಾರೆ’ ಎಂದೂ ದೂರಿದ್ದಾರೆ.
‘ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಧಾರ್ಮಿಕ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಮತ್ತು ದೇಶದ 140 ಕೋಟಿ ಜನತೆಗೆ ಅಗೌರವ ಉಂಟು ಮಾಡಿದ್ದಾರೆ. ಶ್ರದ್ಧಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವಾಗಿ ಮಾಡಿರುವುದು ಹಿಂದೂಗಳಿಗೆ ಮಾಡಿರುವ ದ್ರೋಹ’ ಎಂದು ಅಭಿಪ್ರಾಯಪಟ್ಟಿದ್ದಾರೆ.
‘30-35 ವರ್ಷಗಳಿಂದ ಬಿಜೆಪಿ ಮತ್ತು ಸಂಘಪರಿವಾರ ರಾಮನ ಹೆಸರಲ್ಲಿ ನಡೆಸಿಕೊಂಡು ಬಂದಿರುವ ರಾಜಕೀಯವನ್ನು ಗಂಭೀರವಾಗಿ ಗಮನಿಸುತ್ತಾ ಬಂದಿರುವ ದೇಶದ ಜನರು ಈ ಬಾರಿ ಇಂತಹ ಡೋಂಗಿ ಹಿಂದುತ್ವದ ಜಾಲಕ್ಕೆ ಬಲಿಯಾಗುವುದಿಲ್ಲವೆಂಬ ವಿಶ್ವಾಸವಿದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.