ADVERTISEMENT

10ನೇ ತರಗತಿ ಮಕ್ಕಳಿಗೂ ಮೊಟ್ಟೆ: ಬಾಲಕಿ ಬರೆದ ಪತ್ರ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಸೆಪ್ಟೆಂಬರ್ 2023, 11:47 IST
Last Updated 8 ಸೆಪ್ಟೆಂಬರ್ 2023, 11:47 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ‘8ನೇ ತರಗತಿವರೆಗಿನ ಮಕ್ಕಳಿಗಷ್ಟೇ ಮೊಟ್ಟೆ ವಿತರಿಸುತ್ತಿದ್ದುದರಿಂದ, ಅವರು ಇತರ ಮಕ್ಕಳೊಂದಿಗೆ ಹಂಚಿಕೊಂಡು ತಿನ್ನುತ್ತಿದ್ದರು. ಆ ಮಾನವೀಯ ಗುಣ ಸರ್ಕಾರದ ಗಮನ ಸೆಳೆದ ಪರಿಣಾಮವಾಗಿಯೇ 9, 10ನೇ ತರಗತಿ ಮಕ್ಕಳಿಗೂ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚಾಲನೆ ನೀಡಿದೆ.

9, 10ನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುತ್ತಿರುವ ಕುರಿತು ಶಾಲಾ ಬಾಲಕಿಯೊಬ್ಬರು, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ‘ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರೆಯಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ. ನಮ್ಮ ಈ ವಿದ್ಯಾರ್ಥಿಸ್ನೇಹಿ ನಿರ್ಧಾರದ ಬಗ್ಗೆ ಆಶಾ ನೆಹರು ಪಾಟೀಲ್ ಎಂಬ ಪುಟ್ಟ ಬಾಲಕಿಯೊಬ್ಬಳು ನನಗೆ ಪತ್ರ ಬರೆದು ತನ್ನ ಸಂತಸ ಹಂಚಿಕೊಂಡಿದ್ದಾಳೆ ಮಾತ್ರವಲ್ಲ, ಇಂತಹ ಕಾರ್ಯಕ್ರಮಗಳನ್ನು ನೀಡುತ್ತಿರುವ ತಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಅಕ್ಕರೆಯಿಂದ ಸಲಹೆ ನೀಡಿದ್ದಾಳೆ’ ಎಂದು ತಿಳಿಸಿದ್ದಾರೆ.

ADVERTISEMENT

ಪುಟ್ಟ ಬಾಲಕಿಯ ಪತ್ರವು ಈ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತು. ಇಂಥ ಮುಗ್ಧ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವುದು ನಮ್ಮ‌ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಶಾಂತಿ, ಸೌಹಾರ್ದತೆಯ ಸಮೃದ್ಧ ಕರ್ನಾಟಕ ನಿರ್ಮಾಣದ ನನ್ನ ಸಂಕಲ್ಪಕ್ಕೆ ಈ ದಿನ ಇನ್ನಷ್ಟು ಬಲ ಬಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಓದಿ... ಸರ್ಕಾರಕ್ಕೆ ಮುಟ್ಟಿದ ಮಕ್ಕಳ ಮಾನವೀಯತೆ: 9, 10ನೇ ತರಗತಿ ಮಕ್ಕಳಿಗೂ ಮೊಟ್ಟೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.