ADVERTISEMENT

ಪ್ಯಾಕೆಟ್‌ನಲ್ಲಿ ಹಾಲಿನ ಪ್ರಮಾಣ ಹೆಚ್ಚಿಸಿರುವುದಕ್ಕೆ ದರ ಹೆಚ್ಚಳ: ಸಿಎಂ ಸಮರ್ಥನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಜೂನ್ 2024, 11:56 IST
Last Updated 25 ಜೂನ್ 2024, 11:56 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ನಂದಿನ ಹಾಲಿನ ದರ ಏರಿಕೆ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ಹೊರೆಯಾಗದ ರೀತಿಯಲ್ಲಿ ತಲುಪಿಸುವ ಉದ್ದೇಶದಿಂದ ಮತ್ತು ಹೈನುಗಾರರ ಹಿತದೃಷ್ಟಿಯಿಂದ ಕೆಎಂಎಫ್‌ ಈ ನಿರ್ಣಯ ಕೈಗೊಂಡಿದೆ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ. 15ರಷ್ಟು ಹೆಚ್ಚಳವಾಗಿದೆ. ಹಿಂದಿನ ವರ್ಷ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ. ಆದ್ದರಿಂದ, ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು. ಯಾವುದೇ ಕಾರಣಕ್ಕೂ ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್‌ ಹಾಲಿನ ಪ್ಯಾಕೇಟಿಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲನ್ನು ಸೇರಿಸಲಾಗಿದೆ. ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ. ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ’ ಎಂದು ವಿವರಿಸಿದ್ದಾರೆ.

ADVERTISEMENT

ರಾಜ್ಯದಲ್ಲಿ ಈವರೆಗೆ 1,000 ಮಿ.ಲೀ ಹಾಲಿಗೆ ₹42 ಹಾಗೂ 500 ಮಿ.ಲೀ ಹಾಲಿಗೆ ₹22 ದರವನ್ನು ನಿಗದಿಪಡಿಸಲಾಗಿತ್ತು. ಇನ್ನು ಮುಂದೆ 1,050 ಮಿ.ಲೀ ಹಾಲಿಗೆ ₹44 ಮತ್ತು 550 ಮಿ.ಲೀಗೆ ₹24 ದರ ನಿಗದಿಪಡಿಸಲಾಗುತ್ತದೆ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆಎಂಎಫ್‌ ಸಂಸ್ಥೆಯು ತೆಗೆದುಕೊಂಡಿರುವ ನಿರ್ಣಯವಾಗಿದೆ. ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ಹೊರೆಯಾಗದ ರೀತಿಯಲ್ಲಿ ತಲುಪಿಸುವ ಸದುದ್ದೇಶವನ್ನು ಇದು ಹೊಂದಿದೆ ಎಂದು ಹೇಳಿದ್ದಾರೆ.

ಈಗಾಗಲೇ ಹಾಲಿನ ಪೌಡರ್‌ ತಯಾರಿಕೆಗೆ ಗರಿಷ್ಟ ಪ್ರಮಾಣದ ಹಾಲನ್ನು ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ. ಈಗ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ರೈತರಿಂದ ಖರೀದಿಸಿ, ಗ್ರಾಹಕರಿಗೂ ಹೊರೆಯಾಗದ ರೀತಿಯಲ್ಲಿ ಮಾರಾಟ ಮಾಡುವ ಸಲುವಾಗಿ ಕೆಎಂಎಫ್‌ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.