ಕಲಬುರಗಿ: ಎಚ್.ಕಾಂತರಾಜ ಅವರ ಆಯೋಗವು ರಾಜ್ಯದ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ವರದಿ ಸಲ್ಲಿಸಿದೆ. ನಾಳೆ (ಏ.17) ನಡೆಯುವ ಸಚಿವ ಸಂಪುಟದಲ್ಲಿ ಚರ್ಚೆ ನಡೆಯಲಿದೆ. ಇದರಿಂದ ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ವಿಭಾಗ ಮಟ್ಟದ ಉದ್ಯೋಗ ಮೇಳದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಸಚಿವರಿಗೆ ಅವಕಾಶ ನೀಡಲಾಗುವುದು. ಇದು ಜನಗಣತಿ ಅಲ್ಲ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಷ್ಟೇ. ಆದರೂ, ಯಾರಿಗೂ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ. ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ಅಭಿಪ್ರಾಯಗಳನ್ನೂ ಆಲಿಸಲಾಗುವುದು' ಎಂದು ಹೇಳಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಸಿಲುಕಿಸಲು ಬಿಜೆಪಿಯವರು ಸಂಚು ನಡೆಸಿದ್ದಾರೆ ಎಂದು ಟೀಕಿಸಿದರು.
ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ, ಪ್ರಿಯಾಂಕ್ ಖರ್ಗೆ, ಶರಣಬಸಪ್ಪ ದರ್ಶನಾಪುರ, ಶಾಸಕ ಅಲ್ಲಮಪ್ರಭು ಪಾಟೀಲ ಈ ಸಂದರ್ಭದಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.