
ಬೆಂಗಳೂರು: ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ 2025-26ನೇ ಸಾಲಿನಲ್ಲಿ 205 ವಿಧಾನಸಭಾ ಕ್ಷೇತ್ರಗಳಿಗೆ ₹8,666.50 ಕೋಟಿ ಅನುದಾನ ಹಂಚಿಕೆ ಮಾಡಿದ್ದು, ಬಳಕೆಗೆ ಮೂರು ತಿಂಗಳಷ್ಟೇ ಉಳಿದಿದ್ದರೂ ಟೆಂಡರ್ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ.
ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲಾ ಟೆಂಡರ್ ಪ್ರಕ್ರಿಯೆಗಳನ್ನು ಜ.10ರ ಒಳಗಾಗಿ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.
ಹಂಚಿಕೆಯಾದ ಅನುದಾನದಲ್ಲಿ ಈಗಾಗಲೇ ₹1 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ. 19 ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಬಾಕಿ ಇದ್ದು, ಪ್ರಸ್ತಾವಗಳ ಸ್ವೀಕಾರವಾದ ತಕ್ಷಣ ಹಣ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
2024-25ನೇ ಸಾಲಿನಲ್ಲಿ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ ₹25 ಕೋಟಿಯಂತೆ ಒಟ್ಟು ₹3,510 ಕೋಟಿ ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು. ಇದರಲ್ಲಿ ಈಗಾಗಲೇ ₹2,040 ಕೋಟಿ ಮೊತ್ತದಲ್ಲಿ ಶೇ 58ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ. ₹920 ಕೋಟಿ ವೆಚ್ಚ ಭರಿಸಲಾಗಿದೆ. ₹1,205 ಕೋಟಿ ಬಿಡುಗಡೆಗೆ ಬೆಳಗಾವಿ ಅಧಿವೇಶನದ ವೇಳೆ ಆದೇಶ ನೀಡಲಾಗಿದೆ. ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಮೊತ್ತವನ್ನು ತ್ವರಿತವಾಗಿ ಪಾವತಿಸಲು ಎಲ್ಲ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
2024-25ರಲ್ಲಿ ಮಳೆ ಹಾನಿಯಿಂದ ಉಂಟಾದ ರಸ್ತೆ ದುರಸ್ತಿಗಾಗಿ ₹1,890 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, ₹250 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ರೈಲ್ವೆ ಯೋಜನೆ: 2,685 ಎಕರೆ ಸ್ವಾಧೀನ ಬಾಕಿ
ರಾಜ್ಯದಲ್ಲಿ ಅನುಮೋದನೆಗೊಂಡಿರುವ ರೈಲು ಯೋಜನೆಗಳಿಗೆ 16,554 ಎಕರೆ ಜಮೀನು ಅಗತ್ಯ ಇದ್ದು, ಶೇ 84ರಷ್ಟು ಭೂ ಸ್ವಾಧೀನ ಪೂರ್ಣಗೊಂಡಿದೆ. 2,685 ಎಕರೆ ಸ್ವಾಧೀನ ಬಾಕಿ ಇದೆ ಎಂದು ಸಿದ್ದರಾಮಯ್ಯ ಹೇಳಿದರು. ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆ ಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಕುಡಚಿ-ಬಾಗಲಕೋಟೆ, ತುಮಕೂರು-ದಾವಣಗೆರೆ, ಬೇಲೂರು-ಹಾಸನ, ಶಿವಮೊಗ್ಗ-
ರಾಣೆಬೆನ್ನೂರು, ಧಾರವಾಡ-ಬೆಳಗಾವಿ ರೈಲು ಮಾರ್ಗಗಳ ನಿರ್ಮಾಣ ಕಾಮಗಾರಿಯ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಸೂಚಿಸಿದರು.
ನಿರ್ಮಾಣ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ₹2,581.67 ಕೋಟಿ, ಭೂಸ್ವಾಧೀನ ಪ್ರಕ್ರಿಯೆಗೆ ₹2,950.22 ಕೋಟಿ ಬಿಡುಗಡೆ ಮಾಡಿದೆ. ಆರು ವಿಮಾನನಿಲ್ದಾಣ ಕಾಮಗಾರಿಗಳು ಅನುಷ್ಠಾನದ ವಿವಿಧ ಹಂತದಲ್ಲಿವೆ. ಹಾಸನ ವಿಮಾನನಿಲ್ದಾಣ ಭೂಸ್ವಾಧೀನ ಪರಿಹಾರವನ್ನು ರೈತರಿಗೆ ವಿತರಿಸಬೇಕು. ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು ಎಂದು ನಿರ್ದೇಶನ ನೀಡಿದರು.
ಮೆಕ್ಕೆಜೋಳ: 76,430 ಟನ್ ಬಾಕಿ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 17,350 ಟನ್ ಮೆಕ್ಕೆಜೋಳ ಖರೀದಿ ಮಾಡಿದ್ದು, ಇನ್ನೂ 76,430 ಟನ್ ಖರೀದಿ ಬಾಕಿ ಇದೆ. 93,782 ಟನ್ ಮೆಕ್ಕೆಜೋಳ ಖರೀದಿಗೆ ಕೋರಿಕೆ ಪಡೆಯಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಎಥೆನಾಲ್ ಖರೀದಿಸಲು ಕೇಂದ್ರ ಸರ್ಕಾರಕ್ಕೆ ಮಾಡಿದ್ದ ಮನವಿಗೆ ಇದುವರೆಗೆ ಪ್ರತಿಕ್ರಿಯೆ ಬಂದಿಲ್ಲ. ಕೇಂದ್ರ ಸರ್ಕಾರ ರಾಜ್ಯದ ಮೆಕ್ಕೆಜೋಳ ಬೆಳೆಗಾರರ ಕುರಿತು ನಿರ್ಲಕ್ಷ್ಯ ಧೋರಣೆಯನ್ನು ಮುಂದುವರಿಸಿದೆ. ಹಾಗಾಗಿ, ಕೋರಿಕೆಯ ಪ್ರಮಾಣದಷ್ಟು ಮೆಕ್ಕೆಜೋಳ ಖರೀದಿಸಲು ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.