ADVERTISEMENT

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ತರಗತಿ: ಸಿ.ಎಂ. ಸಭೆ ಇಂದು

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 19:31 IST
Last Updated 18 ಡಿಸೆಂಬರ್ 2020, 19:31 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ    

ಬೆಂಗಳೂರು: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳನ್ನು ಜ.1ರಿಂದ ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ಶನಿವಾರ ನಡೆಯಲಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಧ್ಯಾಹ್ನ ನಡೆಯಲಿರುವ ಈ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
ಸಚಿವ ಎಸ್. ಸುರೇಶ್ ಕುಮಾರ್ ಮತ್ತು ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳ ಸ್ಥಿತಿಗತಿ ನೋಡಿಕೊಂಡು ಉಳಿದ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಯಲಿದೆ.

ADVERTISEMENT

ಶಾಲಾ-ಕಾಲೇಜು ತರಗತಿ ನಡೆಯುವ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರು, ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದು, ಜ. 1ರಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳು ಆರಂಭವಾಗುವುದು ಬಹುತೇಕ ಖಚಿತ.

ಆರಂಭಕ್ಕೆ ಒತ್ತಾಯ
ಶಾಲಾ–ಕಾಲೇಜುಗಳನ್ನು ಆದಷ್ಟು ಶೀಘ್ರ ಪುನರಾರಂಭಿಸಬೇಕು ಎಂಬ ಒತ್ತಾಯವೂ ಶುರುವಾಗಿದೆ.

‘ಸಾರ್ವಜನಿಕ ಚಟುವಟಿಕೆಗಳಿಗೆ ಈಗಾಗಲೇ ಅವಕಾಶ ನೀಡಲಾಗಿದೆ. ಹೋಟೆಲು, ಮಾರುಕಟ್ಟೆಗಳು, ಮಾಲ್‌ಗಳು ಹಾಗೂ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಇಂತಹ ಕಡೆಗಳಲ್ಲೆಲ್ಲ ಮಕ್ಕಳಿಗೂ ಜೊತೆಯಲ್ಲಿ ಕರೆದೊಯ್ಯಲು ಅವಕಾಶ ನೀಡಿ, ಕೇವಲ ಶಾಲೆಗಳನ್ನು ಮಾತ್ರ ಮುಚ್ಚಿರುವುದು ಅವೈಜ್ಞಾನಿಕ ಕ್ರಮ. ಕೂಡಲೇ ಶಾಲೆಗಳನ್ನು ತೆರೆಯಬೇಕು’ ಎಂದು ಭಾರತ ಕಮ್ಯುನಿಸ್ಟ್ ಪಕ್ಷ ಒತ್ತಾಯಿಸಿದೆ. ‘ಕೋವಿಡ್‌ ಪ್ರಕರಣಗಳು ಹೆಚ್ಚಾಗಿದ್ದ ಜೂನ್‌–ಜುಲೈ ಅವಧಿಯಲ್ಲಿಯೇ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ, ಸಿಇಟಿ, ನೀಟ್‌ಗಳನ್ನು ಕೂಡ ಯಶಸ್ವಿಯಾಗಿ ನಡೆಸಲಾಗಿದೆ. ಶಿಕ್ಷಕರು, ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಂಡು ಶಾಲಾ–ಕಾಲೇಜು ಆರಂಭಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಪಕ್ಷ ಆಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.